ಸೇವಾ ಭದ್ರತೆ, ಖಾಯಂಮಾತಿ, ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೂರಾರು ಮಂದಿ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಕಾರ್ಯಕರ್ತರು ಸರಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾವಣೆಗೊಂಡ ನೂರಾರು ಮಂದಿ ಪುನರ್ವಸತಿ ಕಾರ್ಯಕರ್ತರು ಕಳೆದ 17 ವರ್ಷಗಳಿಂದ ಗೌರವಧನ ಆಧಾರದಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಕಾರ್ಯಕರ್ತರನ್ನು ಸರಕಾರ ಕಡೆಗಣಿಸಿದೆ ಎಂದು ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿದೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಟಿ.ರಾಮಚಂದ್ರ, ರಾಜ್ಯದಲ್ಲಿ ಸುಮಾರು 15ಸಾವಿರಕ್ಕೂ ಅಧಿಕ ವಿಕಲಚೇತನರ ಬ್ಯಾಕ್‌ಲಾಗ್ ಹುದ್ದೆಗಳು ಖಾಲಿಯಿದ್ದು, ಪ್ರಸ್ತುತ ಗ್ರಾಮೀಣ ಪುನರ್ವಸತಿ ಯೋಜನೆಯಡಿ 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 6422 ಕಾರ್ಯಕರ್ತರನ್ನು ಮಾನವೀಯತೆ ಆಧಾರದಲ್ಲಿ ಒನ್‌ಟೈಮ್ ಸೆಟ್ಲ್‌ಮೆಂಟ್ ಯೋಜನೆಯಡಿ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ರೈತರು ಸಿರಿಧಾನ್ಯ ಬೆಳೆಗೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ
ಇಲಾಖೆಯ ಎಲ್ಲಾ ಯೋಜನೆಗಳನ್ನು ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ಪ್ರತ್ಯೇಕವಾಗಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಚಿವಾಲಯವನ್ನು ಸ್ಥಾಪಿಸಬೇಕು ಹಾಗೂ ರಾಜ್ಯದಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿರುವ ವಿಕಲಚೇತನರ ಆರ್ಥಿಕ ಅಭಿವೃದ್ದಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಗ್ರಂಥಪಾಲಕರು ಮತ್ತು ಪೌರಕಾರ್ಮಿಕರಂತೆ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂಗಳಿಗೆ ಕನಿಷ್ಠ ವೇತನ ನಿಗಧಿಗೊಳಿಸಬೇಕು ಎಂದರು.
ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿದೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾತನಾಡಿ, ಕಳೆದ 17 ವರ್ಷಗಳಿಂದ ಕನಿಷ್ಠ ವೇತನ, ಆರೋಗ್ಯ ವಿಮೆ, ಸೇವಾ ಭದ್ರತೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳಿಂದ ವಂಚಿತರಾಗಿ ಸೇವೆ ಸಲ್ಲಿಸುತ್ತಿರುವ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂಗಳಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ವಿಕ್ರಂನಂತಹ ಬಡವರು ಯಾಕೆ ನಕ್ಸಲರಾಗುತ್ತಾರೆ? ಹೊರ ಬಂದವರಿಗೆ ಸರ್ಕಾರ ಮಾಡುತ್ತಿರುವುದೇನು?
ನಿವೃತ್ತಿ ಇಡಿಗಂಟು, ಹೊಸ ತಾಲೂಕುಗಳಿಗೆ ನೇಮಕ, ಗ್ರಾಮೀಣ ಪುನರ್ವಸತಿ ಯೋಜನೆ ಮಾರ್ಗಸೂಚಿ ತಿದ್ದುಪಡಿ ಕಡತಗಳು ಸರಕಾರದ ವಿವಿಧ ಹಂತಗಳಲ್ಲಿ ಬಾಕಿಯಿದ್ದು, ಕೂಡಲೇ ಕಡತಗಳನ್ನು ವಿಲೇವಾರಿ ಮಾಡಬೇಕು. ನಮ್ಮೆಲ್ಲಾ ಬೇಡಿಕೆಗಳನ್ನು ಬರುವ ಡಿ.3ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯಂದು ಈಡೇರಿಸಬೇಕು. ಇಲ್ಲವಾದಲ್ಲಿ ಒಕ್ಕೂಟದ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಎಸ್, ಜಿಲ್ಲಾ ಉಪಾಧ್ಯಕ್ಷ ಸುನಿಲ್, ಜಿಲ್ಲಾ ಖಚಾಂಚಿ ರಾಮಪ್ಪ ಎ.ವಿ, ಜಿಲ್ಲಾ ಸಂಚಾಲಕ ನಾಗರಾಜು ವಿ ಸೇರಿದಂತೆ ನೂರಾರು ಮಂದಿ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂಗಳು ಹಾಜರಿದ್ದರು.