ಜೆಎಂಎಂ ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸಮಾರಂಭ ಹಿನ್ನೆಲೆಯಲ್ಲಿ ರಾಂಚಿ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಸೊರೇನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.’ಇಂಡಿಯಾ’ ಕೂಟದ ಪ್ರಮುಖ ನಾಯಕರು ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಹೇಮಂತ್ ಸೊರೇನ್ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಿಸಿದ್ದಾರೆ.
ಹೇಮಂತ್ ಸೊರೇನ್ ಅವರ ಜೆಎಂಎಂ ನೇತೃತ್ವದ ಮೈತ್ರಿ ಶನಿವಾರ ಜಾರ್ಖಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿತು. 81 ಸದಸ್ಯ ಬಲದ ಅಸೆಂಬ್ಲಿಯಲ್ಲಿ 56 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ 24 ಸ್ಥಾನಗಳನ್ನು ಪಡೆದುಕೊಂಡಿತು. ಹೇಮಂತ್ ಸೊರೇನ್ ಅವರು ಬಿಜೆಪಿಯ ಗಮ್ಲಿಯೆಲ್ ಹೆಂಬ್ರೋಮ್ ಅವರನ್ನು 39,791 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.