ಸ್ವಘೋಷಿತ ರಾಷ್ಟ್ರೀಯ ಭಾಷೆ ಎಂದು ಹೇಳಲಾಗುವ ಹಿಂದಿ ಎಂಬ ಘಟಸರ್ಪವು ಕನ್ನಡವನ್ನು ನುಂಗಲು ಬಿಡಬಾರದು ಎಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಅಗ್ರಹಾರ ಕೃಷ್ಣಮೂರ್ತಿ ಕರೆ ಕೊಟ್ಟರು.
ತುಮಕೂರು ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತದಲ್ಲಿ 11 ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ಪಡೆದರೂ ಸಹ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಬಿಂಬಿಸಲಾಗುತ್ತಿದೆ. ಎಲ್ಲರಿಗೂ ಅವರವರ ಮಾತೃಭಾಷೆ ಮಹತ್ವವಾದುದು. ನಮ್ಮ ಭಾಷೆಯನ್ನು ನಾವು ಪ್ರೀತಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದು ತಿಳಿಸಿದರು.

ಬಹು ಭಾಷಿಕ, ಬಹು ಸಂಸ್ಕೃತಿ, ಬಹು ಸಂಪ್ರದಾಯಗಳನ್ನು ಹೊಂದಿರುವ ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ಸಾವಿರಾರು ವರ್ಷಗಳ ಇತಿಹಾಸವಿದ್ದು, ನಾಡು-ನುಡಿಗಾಗಿ ಹೋರಾಡಿದ ಹೋರಾಟಗಾರರ ಶ್ರಮವನ್ನು ವ್ಯರ್ಥ ಮಾಡಬಾರದು ಎಂದು ತಿಳಿಸಿದರು.
ಅಭಿವ್ಯಕ್ತಿಗೆ ಧಕ್ಕೆ
ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಲೇಖಕರು, ಸಾಹಿತಿಗಳು, ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು ಅಭಿವ್ಯಕ್ತಿಗೊಳಿಸಲೂ ಸಹ ತೊಡಕುಗಳು ಉಂಟಾಗುತ್ತಿವೆ ಎಂದು ಸಮ್ಮೇಳನಾಧ್ಯಕ್ಷರು ಬೇಸರ ವ್ಯಕ್ತಪಡಿಸಿದರು. ಕನ್ನಡ ಭಾಷೆಯಲ್ಲಿ ಇತರೆ ಭಾಷೆಗಳಿಗಿಂತ ಹೆಚ್ಚು ವೈಚಾರಿಕತೆ ಮತ್ತು ವೈಜ್ಞಾನಿಕತೆ ಬಗ್ಗೆ ಸಾಹಿತ್ಯಗಳು ರಚನೆಯಾಗಿರುವುದೇ ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಮರಣ ಸಂಚಿಕೆ ಕಲ್ಪ ಸಂಪದ ಪುಸ್ತಕವನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪಾಲಿಕೆ ಆಯುಕ್ತೆ ಅಶ್ವಿಜ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಗೌರವ ಕಾರ್ಯದರ್ಶಿ ಡಾ. ಡಿ.ಎನ್.ಯೋಗೀಶ್ವರಪ್ಪ, ಡಾ. ಕಂಟಲಗೆರೆ ಸಣ್ಣಹೊನ್ನಯ್ಯ, ಮುರುಳಿಕೃಷ್ಣಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಚೇತನ್, ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಚಾಂದು, ರಾಜಶೇಖರ್, ಜಿಲ್ಲೆಯ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಪರಿಷತ್ತಿನ ದ್ವಜಾರೋಹಣವನ್ನು ನೆರವೇರಿಸಿದರು. ನಗರದ ಬಿಜಿಎಸ್ ವೃತ್ತದಿಂದ ಗಾಜಿನ ಮನೆಯವರೆಗೆ ಸಮ್ಮೇಳಾನಾಧ್ಯಕ್ಷರಾದ ಅಗ್ರಹಾರ ಕೃಷ್ಣಮೂರ್ತಿ ದಂಪತಿಗಳನ್ನು ವಿವಿಧ ಕಲಾ ತಂಡಗಳಿಂದ ಮೆರವಣಿಗೆಯ ಮೂಲಕ ಕರೆತರಲಾಯಿತು.