ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಕೃತ್ಯವನ್ನ ಖಂಡಿಸಿ, ಹಿಂದುತ್ವವಾದಿ ಸಂಘಟನೆಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿವೆ. ಈ ವೇಳೆ, ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಿದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಘಟನೆಗಳ ಕಾರ್ಯಕರ್ತರೇ ಆಗಿದ್ದಾರೆ ಎಂದು ವರದಿಯಾಗಿದೆ.
ಕಲಬುರಗಿಯಲ್ಲಿ ಬಂಜಾರ ಸಮಾಜ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಹಿಂದು ಸಮಾಜ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಎಸ್‌ವಿಎಲ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ, ಪ್ರತಿಭಟನೆಯಲ್ಲಿ ಭಾಗಿಯಾಗದ್ದ ಕೆಲವು ಕಿಡಿಗೇಡಿಗಳು ತಾಲೂಕು ಕಚೇರಿಯ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಘಟನೆಯಲ್ಲಿ ಕಾರಿನ ಗಾಜುಗಳು ಪುಡಿಯಾಗಿವೆ. ಕೆಲ ಅಂಗಡಿಗಳ ಮೇಲೂ ಕಲ್ಲು ತೂರಾಟ ನಡೆದಿದ್ದು, ಟೈರ್‌ಗಳಿಗೂ ಬೆಂಕಿ ಹಚ್ಚಲಾಗಿದೆ. ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಿಂಸಾಚಾರ ನಡೆಸದಂತೆ ಸಂಘಟನೆಗಳು ಮುಖಂಡರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಕಲ್ಲು ತೂರಾಟ ನಡೆಸಿರುವ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಗುಂಪುಗಳನ್ನು ಚದುರಿಸಿದ್ದಾರೆ. ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದಾರೆ. ಆರು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಸಾಗರ್ ರಾಠೋಡ್, ರಾಹುಲ್ ರಾಠೊಡ್, ರಮೇಶ್ ರಾಠೋಡ್, ಅಭಿಷಕ್ ರಾಠೋಡ್, ಶಂಕರ್ ರಾಠೋಡ್ ಹಾಗೂ ಪ್ರದೀಪ್ ಪವಾರ್ ಎಂದು ಗುರುತಿಸಲಾಗಿದೆ. ಇವೆರಲ್ಲರೂ ಪ್ರತಿಭಟನೆಯಲ್ಲಿ ಭಾಗಿದ್ದರು ಎಂದು ತಿಳಿದುಬಂದಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ಸಂಸದ ಉಮೇಶ ಜಾಧವ್, ಮಾಜಿ ಸಚಿವ ರೇವು ನಾಯ್ಕ್ ಬೆಳಮಗಿ, ವಿಎಚ್‌ಪಿ ಮುಖಂಡ ಲಿಂಗರಾಜಪ್ಪ ಅಪ್ಪ, ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಿದ್ದರು.