ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್ ವಾದ ವಿವಾದಗಳನ್ನು ಆಲಿಸಿ ವಿಚಾರಣೆಯನ್ನು ಮುಂದೂಡಿದೆ. ನ್ಯಾಯಾಲಯವು ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿದೆ.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸುತ್ತಿದೆ.
ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಏಕಸದಸ್ಯ ಅಥವಾ ಬೇರೆ ಪೀಠದ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲಾಗದು: ಹೈಕೋರ್ಟ್
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್, ದುಷ್ಯಂತ್ ದವೆ ವಾದಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ, ಕಪಿಲ್ ಸಿಬಲ್ ವಾದಿಸಿದ್ದಾರೆ.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್‌ಗೆ ಕೆಲವರು ನಿಂದಿಸಿ ಪತ್ರ ಬರೆದಿರುವ ವಿಚಾರವನ್ನು ಕಪಿಲ್ ಸಿಬಲ್ ಪ್ರಸ್ತಾಪಿಸಿದ್ದಾರೆ. ಈ ವೇಳೆ “ನಿಮ್ಮ ಅರ್ಜಿದಾರರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿ” ಎಂದು ವಕೀಲ ರಾಘವನ್‌ಗೆ ತಿಳಿಸಿದ್ದಾರೆ.
ಈವರೆಗೆ ಲೋಕಾಯುಕ್ತ ಪೊಲೀಸರು ನಡೆಸಿರುವ ತನಿಖೆ ವರದಿ ನೀಡುವಂತೆ ತಿಳಿಸಿರುವ ಪೀಠ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವಸ್ತುಸ್ಥಿತಿ ವರದಿಯನ್ನು ದಾಖಲೆಯಲ್ಲಿ ಸ್ವೀಕರಿಸಿದೆ.
