ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಎಸ್.ಹೆಚ್ ಅವರು ಗುಜರಾತ್‌ನ ಭರೂಚ್‌ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕಠಿಣ ಕಾನೂನು, ಶೀಘ್ರ ವಿಚಾರಣೆ, ಗರಿಷ್ಠ ಶಿಕ್ಷೆಗೆ ಒತ್ತಾಯಿಸಿ ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುವ ಸಲುವಾಗಿ ಪಾದಯಾತ್ರೆ ಹೊರಟಿದ್ದ ಅವರು ಗುಜರಾತ್ ರಾಜ್ಯದ ಭರೂಚ್‌ನಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಈ ಪಾದಯಾತ್ರೆಯಲ್ಲಿದ್ದವರಿಗೆ ನೈತಿಕ ಬೆಂಬಲ ನೀಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಸಹ ನೆನ್ನೆ ಮತ್ತು ಇಂದು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭರೂಚ್ ನಗರದ ಬಳಿಯ ಹೆದ್ದಾರಿಯಲ್ಲಿ ಲಾರಿಯೊಂದು ರಸ್ತೆಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದು, ಕೆಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಮತ್ತು ಮಂಗಳೂರಿನ ಕುಂಜಿ ಮೂಸಾ ಮೃತಪಟ್ಟಿದ್ದಾರೆ. ಮಹಿಳೆಯೊಬ್ಬರೂ ಸೇರಿದಂತೆ ನಾಲ್ಕು ಜನರಿಗೆ ತೀವ್ರ ಗಾಯಗಳಾಗಿವೆ. ಅವರು ಭರೂಚ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾನೂನು ಪ್ರಕ್ರಿಯೆಗಳನ್ನು ಶೀಘ್ರ ಮುಗಿಸಿ ಮೃತದೇಹಗಳನ್ನು ರಾಜ್ಯಕ್ಕೆ ವಾಪಸು ತರುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಗುಜರಾತ್ ಸರ್ಕಾರದ ಅಧಿಕಾರಿಗಳು ಮತ್ತು ಕೆಆರ್‌ಎಸ್ ಪಕ್ಷದ ಮುಖಂಡರು ಸಂಪರ್ಕದಲ್ಲಿದ್ದು, ಆ ನಿಟ್ಟಿನಲ್ಲಿ ಮುಂದುವರೆದಿದ್ದಾರೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಪುರುಷರ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟ: ಆಯ್ಕೆ, ತರಬೇತಿ ಶಿಬಿರ
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಂಪುರ ಗ್ರಾಮದ ಲಿಂಗೇಗೌಡ ಅವರು ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಪದವಿ ಮುಗಿಸಿ, ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ ಪದವಿ ಪಡೆದು ಆನಂತರ ಅಬಕಾರಿ ಇನ್ಸ್‌ಪೆಕ್ಟರ್ ಆಗಿ ಸರ್ಕಾರಿ ಉದ್ಯೋಗಕ್ಕೆ ಸೇರಿದ್ದರು. ಸಮಾಜದ ಭ್ರಷ್ಟ ವ್ಯವಸ್ಥೆಯಿಂದ ಬೇಸತ್ತಿದ್ದ ಅವರು ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ 2018ರಲ್ಲಿ ಸ್ವರಾಜ್ ಇಂಡಿಯಾ ಪಕ್ಷದಿಂದ ಮದ್ದೂರು ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದರು. ಆನಂತರ 2019ರ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

2019ರಲ್ಲಿ ಕೆ.ಆರ್.ಎಸ್ ಪಾರ್ಟಿ ಸೇರಿದ್ದರು. ಆನಂತರ ಪೂರ್ಣಪ್ರಮಾಣದಲ್ಲಿ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆ.ಆರ್.ಎಸ್ ಪಾರ್ಟಿಯಿಂದ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಅಲ್ಲದೇ ಇತ್ತೀಚೆಗೆ ನಡೆದ ಶಿಗ್ಗಾವಿ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ರವಿಕೃಷ್ಣ ರೆಡ್ಡಿಯವರ ಪರವಾಗಿ ವ್ಯಾಪಕ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.
ಮಂಗಳೂರಿನ ಕೆ.ಆರ್.ಎಸ್ ಪಕ್ಷದ ಪ್ರವೀಣ್, ಮೂಸಾ ಷರೀಫ್, ನೌಫುಲ್ ಅಬ್ಬಾಸ್, ಬಾಲಕೃಷ್ಣ, ಶುಕ್ರು ಅಹಮದ್, ಹಮ್ಹಾ ಅವರ ತಂಡದ ಜೊತೆ 54ನೇ ದಿನದ ಪಾದಯಾತ್ರೆ ಹೊರಟಿದ್ದರು.