ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಲಭ್ಯವಿಲ್ಲದ ಅಂಗನವಾಡಿ ಕೇಂದ್ರಗಳಿಗೆ 45 ದಿನಗಳೊಳಗೆ ನಿವೇಶನ ಗುರುತಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವರು ಡಿ.12ರ ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಹೆಚ್ಚಿನ ಸ್ಥಳಾವಕಾಶ ಲಭ್ಯವಿರುತ್ತದೆ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲೂಕಿನಲ್ಲಿ 119 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಅಗತ್ಯವಿದೆ, ಅವುಗಳನ್ನು ಗುರುತಿಸಲು ಎಲ್ಲಾ ತಾಲ್ಲೂಕುಗಳ ಸಿಡಿಪಿಒಗಳು ಮುತುವರ್ಜಿ ವಹಿಸಬೇಕು, ಅಂಗನವಾಡಿ ಕೇಂದ್ರ ನಿರ್ಮಾಣವಾಗಬೇಕಿರುವ ಗ್ರಾಮಗಳಿಗೆ ಆಯಾ ಗ್ರಾಮಗಳ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಸಿಡಿಪಿಒಗಳು ಖುದ್ದು ಸ್ಥಳಕ್ಕೆ ತೆರಳಿ ಅಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಹುಡುಕಬೇಕು. ಈ ಪ್ರಕ್ರಿಯೆಯನ್ನು 45 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕು, ಬದ್ಧತೆ ಹಾಗೂ ಉತ್ಸಾಹದಿಂದ ಕಾರ್ಯನಿರ್ವಹಿಸುವಂತೆ ಅವರು ಕಿವಿ ಮಾತು ಹೇಳಿದರು.
ಅಂತೆಯೇ ಜಿಲ್ಲೆಯ ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ 130 ಅಂಗನವಾಡಿ ಕೇಂದ್ರಗಳಿಗೆ ನಿವೇಶನದ ಅಗತ್ಯವಿದೆ, ಇಲ್ಲಿಯೂ ಕೂಡ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಿಡಿಪಿಒಗಳೇ ಖುದ್ದಾಗಿ ತೆರಳಿ ಲಭ್ಯವಿರುವ ಪ್ರದೇಶವನ್ನು ಪರಿಶೀಲಿಸುವಂತೆ ಅವರು ಸೂಚಿಸಿದರು.
ಇದನ್ನು ಓದಿದ್ದೀರಾ? ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಸೂರತ್‌ನಲ್ಲಿ ರಸ್ತೆ ಅಪಘಾತಕ್ಕೆ ಬಲಿ
ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಲಭ್ಯವಿರುವ ಸ್ಥಳಗಳಲ್ಲಿ ಉತ್ತಮ ತರಕಾರಿಗಳನ್ನು ಬೆಳೆಯುವಂತೆ ಪ್ರೋತ್ಸಾಹಿಸಬೇಕು ಎಂದ ಜಿಲ್ಲಾಧಿಕಾರಿಯವರು ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಮಹತ್ವವನ್ನು ಜಿಲ್ಲೆಯಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಲು ಅತ್ಯುತ್ತಮವಾದ ಮಹಿಳಾ ಸಾಧಕರೊಬ್ಬರನ್ನು ಆಯ್ಕೆ ಮಾಡಿಕೊಂಡು ಈ ಯೋಜನೆಯ ಸ್ಫೂರ್ತಿದಾಯಕ ಮಾಹಿತಿಯನ್ನು ವಿಡಿಯೋ ಮಾಡಿಸಿ ಎಲ್ಲಾ ಶಾಲೆಗಳಿಗೂ ತಲುಪಿಸಬೇಕು ಎಚಿದ ಅವರು ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಅಭಿವೃದ್ದಿ ನಿಗಮದ ಧನಶ್ರೀ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳ ಫಲಾನುಭವಿಗಳನ್ನು ಸಮಿತಿ ಸಭೆ ಸದಸ್ಯರ ಸಮಕ್ಷಮದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.
ಇದನ್ನು ನೋಡಿದ್ದೀರಾ? ಬಾಡೂಟ ಅಪರಾಧ ಅಲ್ಲ ಸ್ವಾಮಿ, ಅದು ನಮ್ಮ ಪರಂಪರೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪದ್ಮರಾಜು, ಮಹಿಳಾ ಅಭಿವೃದ್ದಿ ನಿಗಮದ ಅಭಿವೃದ್ದಿ ನಿರೀಕ್ಷರಾದ ಬಿ. ಗಾಯತ್ರಿ ದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಆರ್.ಸಿ.ಎಚ್. ಅಧಿಕಾರಿ ರಾಜು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಬಸವರಾಜೇ ಗೌಡ, ಜಿಲ್ಲಾ ನಿರೂಪಣಾಧಿಕಾರಿ ಪ್ರಸನ್ನ, ಐದು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿದ್ದರು.