ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ತಿರುಚ್ಚಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ದಿಂಡಿಗಲ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ರಿಸೆಪ್ಷನ್ ಹಾಲ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ
ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಕಾರ, ಅಗ್ನಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಆವರಿಸಿದ ದಟ್ಟವಾದ ಹೊಗೆಯಿಂದ ಹಲವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸುಮಾರು 50 ಆಂಬ್ಯುಲೆನ್ಸ್‌ಗಳನ್ನು ಬಳಸಿಕೊಂಡು ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ, ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕನಿಷ್ಠ 30 ರೋಗಿಗಳನ್ನು ಚಿಕಿತ್ಸೆಗಾಗಿ ದಿಂಡಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟರು. ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆಸ್ಪತ್ರೆಯೊಳಗೆ ಸಿಲುಕಿರುವವರನ್ನು ಪತ್ತೆಹಚ್ಚಿ ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ.
