ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ತಪ್ಪಿತಸ್ಥರಾದ ವೈದ್ಯಾಧಿಕಾರಿಗಳು ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಾ.ಬಿ.ಆರ್. ಅಂಬೇಡ್ಕರ್ ಸೇನಾ ಸಮಿತಿ ವತಿಯಿಂದ ರಾಯಚೂರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರ ಸರಣಿ ಸಾವಿನ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ.ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಮಟ್ಟದ ಔಷಧಿಗಳನ್ನು ಸರಬರಾಜು ಮಾಡುತ್ತಿರುವುದು ಹಾಗೂ ಸಿಬ್ಬಂದಿಗಳ ಬೇಜವಾಬ್ದಾರಿತನದಿಂದ ದುರ್ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ದೂರಿದರು.
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕುಂದು ಕೊರತೆ ಸಭೆ ನಡೆಸಬೇಕು. ಬಾಂಗ್ಲಾ ಫಾರ್ಮಾ ಕಂಪನಿಯನ್ನು ಕೂಡಲೇ ಕಪ್ಪು ಪಟ್ಟಿಗೆ ಸೇರಿಸಿ ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ಇವರನ್ನ ಬಂಧಿಸಬೇಕು ಎಂದು ಒತ್ತಾಯಿಸಿದರು.
ಗರ್ಭಿಣಿ ಹಾಗೂ ಬಾಣಂತಿಯರಿಗೆ ಆಯಾ ಭಾಗದ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರದ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರಿಂದ ಸೂಕ್ತ ಚಿಕಿತ್ಸೆ ಹಾಗೂ ಪೌಷ್ಠಿಕ ಆಹಾರ ವಿತರಿಸಲು ಸೂಚಿಸಬೇಕು ಎಂದರು.
ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಔಷಧಿಗಳನ್ನು ಹೊರ ಔಷಧಿ ಅಂಗಡಿಗಳ ಮಾಲೀಕರಿಗೆ ಮಾರಾಟ ಮಾಡುತ್ತಿದ್ದು, ಇದನ್ನು ತಕ್ಷಣ ತಡೆಹಿಡಿದು ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಬೇಕು. ಹಾಗೂ ಗುಣಮಟ್ಟದ ಆಕ್ಸಿಜನ್ ಸರಬರಾಜು ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಬಿ.ಸುಧಾನಂದ ಮಾನ್ವಿ, ಕಾರ್ಯದರ್ಶಿ ಪರಮೇಶ ಯರಮರಸ್, ಕಾರ್ಯಾದ್ಯಕ್ಷ ರಂಗಪ್ಪ ಅಸ್ಕಿಹಾಳ್, ತಿಮ್ಮಪ್ಪ ಕಡಗೋಳ, ಆನಂದ ಏಗನೂರು, ರಾಜು ಆಶಾಪೂರು, ಗೋವಿಂದ ಮೇಸ್ತ್ರಿ, ರಮೇಶ ಸಿರವಾರ, ಶಾಂತಕುಮಾರ ಚಿಕ್ಕಸೂಗೂರು ಸೇರಿದಂತೆ ಅನೇಕರು ಇದ್ದರು.
