ಔರಾದ್ ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಆಡಳಿತ ವ್ಯವಸ್ಥೆಗೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು.ಬಿ ಚವ್ಹಾಣ ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಕೇಳಿದ್ದಾರೆ.
ʼಕೃಷಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಒಳಗೊಂಡು ವಿವಿಧ ಇಲಾಖೆಗಳ ಸಚಿವರಿಗೆ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ. ಔರಾದ(ಬಿ) ತಾಲ್ಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿನ ಸಿಬ್ಬಂದಿ ಕೊರತೆಯ ಕುರಿತಾದ ಪ್ರಶ್ನೆಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉತ್ತರಿಸಿ, ʼತಾಲ್ಲೂಕಿನ 7 ರೈತ ಸಂಪರ್ಕ ಕೇಂದ್ರಗಳಲ್ಲಿ ಮಂಜೂರಾಗಿರುವ 23 ಹುದ್ದೆಗಳ ಪೈಕಿ 19 ಹುದ್ದೆಗಳು ಖಾಲಿ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಖಾಲಿ ಹುದ್ದೆಗಳಿಗೆ ಲಭ್ಯವಿರುವ ಸಿಬ್ಬಂದಿಗಳನ್ನು ಅವರ ಕರ್ತವ್ಯದ ಜೊತೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಲಾಗಿದೆ. ಹಾಗೆಯೇ ವಿವಿಧ ಸಿಬ್ಬಂದಿಗಳ ಸೇವೆಯನ್ನು ಬಳಸಿಕೊಂಡು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆʼ ಎಂದು ಸ್ಪಷ್ಟನೆ ನೀಡಿದ್ದಾರೆ.
ʼಔರಾದ(ಬಿ)ನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಒಬ್ಬರೇ ಖಾಯಂ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ಶಾಸಕರು ಪ್ರಶ್ನಿಸಿದ್ದು, ಉತ್ತರಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಈ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಕರಡು ನಿಯಮಗಳನ್ನು ರಚಿಸಲಾಗಿದೆ. ಈ ನಿಯಮಗಳನ್ನು ಸರ್ಕಾರದ ಅಧಿಸೂಚನೆಯಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿರುತ್ತದೆ. ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ಬೋಧಕ ವೃಂದದ ನೇಮಕಾತಿಗೆ ಕ್ರಮ ವಹಿಸಲಾಗುವುದು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಔರಾದ ಐಟಿಐ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರನ್ನು ಪ್ರಶ್ನಿಸಿದ್ದು, ʼಕಿರಿಯ ತರಬೇತಿ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಪ್ರಕರಣವು ಮಾನ್ಯ ಸರ್ವೋಚ್ಛ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇದ್ದು, ಅವುಗಳು ಇತ್ಯರ್ಥವಾಗುತ್ತಿದ್ದಂತೆ ಖಾಯಂ ಬೋಧಕರನ್ನು ನೇಮಿಸಲಾಗುವುದುʼ ಎಂದು ಉತ್ತರ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ತೀವ್ರಗೊಂಡ ಕಾರಂಜಾ ಸಂತ್ರಸ್ತರ ಧರಣಿ : ಡಿ.18ರಂದು ಸಿಎಂ ನೇತೃತ್ವದಲ್ಲಿ ಸಭೆ
ʼಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಖಾಯಂ ಸಿಬ್ಬಂದಿಗಳ ಕೊರತೆಯಿದ್ದು, ಆಡಳಿತಕ್ಕೆ ತೊಂದರೆಯಾಗುತ್ತಿದೆ. ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಸಾರ್ವಜನಿಕರು ಪ್ರತಿನಿತ್ಯ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಸಿಬ್ಬಂದಿ ಕೊರತೆಯ ಬʼಗ್ಗೆ ಸಾಕಷ್ಟು ಸಲ ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಒಂದು ಇಲಾಖೆಯಲ್ಲಿ ಸಮಸ್ಯೆಯಿದ್ದರೆ ಹೇಗೋ ನಿಭಾಯಿಸಬಹುದು. ಆದರೆ ಎಲ್ಲ ಇಲಾಖೆಗಳಲ್ಲಿಯೂ ಸಮಸ್ಯೆಯಿದೆ.ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಲಾಗಿದೆ. ಸಿಬ್ಬಂದಿ ಕೊರತೆ ನೀಗಿಸುವವರೆಗೆ ನಾನು ಸುಮ್ಮನಿರವುದಿಲ್ಲ ಎಂದು ಶಾಸಕ ಪ್ರಭು ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.