ಬಂಗಾಳಕೊಲ್ಲಿಯಲ್ಲಿ ಎದ್ದಿದ್ದ ಚಂಡಮಾರುತ ಕಡಿಮೆಯಾಗಿದ್ದು, ಮಳೆಯ ಅಬ್ಬರವೂ ಇಳಿದಿದೆ. ಆದರೆ, ಶೀತದ ಅಲೆಗಳು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿಸಲಾಗಿದೆ. ಜೊತೆಗೆ, ರಾಯಚೂರು, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಪ್ರದೇಶದಲ್ಲಿ ಡಿಸೆಂಬರ್ 21ರಿಂದ ಮತ್ತೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 21ರಿಂದ ಮಳೆ ಸುರಿಯುವ ಸಾಧ್ಯತೆ ಇದೆ.
ಸದ್ಯ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು 6-7 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಜಿಲ್ಲೆಗಳಲ್ಲಿ 7.5 ಡಿಗ್ರಿ ಸೆಲ್ಸಿಯನ್ ಉಷ್ಣಾಂಶವಿದೆ. ಇದು ದಾಖಲೆ ಮಟ್ಟದ ಕನಿಷ್ಠ ಉಷ್ಣಾಂಶ ಎಂದು ಹೇಳಲಾಗಿದೆ.