ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.
ಬೀದರ್ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಮುಂಭಾಗದಲ್ಲಿ ಜಮಾಯಿಸಿದ ನೂರಾರು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಬೇಡಿಕೆಗಳು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಅಂಗನವಾಡಿಗಳಲ್ಲಿ ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಬೇಕು. ಗ್ರಾಜ್ಯುಟಿ ಅನುದಾನದ ಬಿಡುಗಡೆ, ಅನುದಾನ ಹೆಚ್ಚಳ, ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂಗೊಳಿಸಬೇಕು. 2018ರಿಂದ ಕೇಂದ್ರ ಸರಕಾರ ಯಾವುದೇ ಗೌರವಧನ ಹೆಚ್ಚಳ ಮಾಡದೇ ಇರುವುದರಿಂದ ಕೂಡಲೇ ₹26 ಸಾವಿರ ಗೌರವಧನ ಹೆಚ್ಚಿಸಬೇಕು. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಘೋಷಿಸಿದಂತೆ ₹15 ಸಾವಿರ ಗೌರವಧನ ಹೆಚ್ಚಿಸಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ʼನಿವೃತ್ತಿಯಾದವರಿಗೆ ಇಡಿಗಂಟು ₹10 ಸಾವಿರ ಮಾಸಿಕ ಪಿಂಚಣಿ, ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡುವುದು ಸೇರಿದಂತೆ 20 ಬೇಡಿಕೆಗಳ ಈಡೇರಿಸಲು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ₹17 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಪಿಡಿಒ
ಪ್ರತಿಭಟನೆಯಲ್ಲಿ ಸಿಐಟಿಯು ಬೀದರ್ ಜಿಲ್ಲಾಧ್ಯಕ್ಷೆ ಸುಶೀಲಾ ಹತ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಶ್ರೀ, ಕಾರ್ಯಧ್ಯಕ್ಷೆ ಶ್ರೀದೇವಿ ಚುಡೇ, ಖಜಾಂಚಿ ಮಹಾದೇವಮ್ಮ, ಪದ್ಮಾವತಿ ಸ್ವಾಮಿ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಅಂಬುಬಾಯಿ ಮಾಳಗೆ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಮಾಳಗೆ ಸೇರಿದಂತೆ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.