ಮಾಜಿ ಸಚಿವ, ಎಂಎಲ್ಸಿ ಸಿ ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಸೇರಿ ಹಲವರ ವಿರುದ್ಧ ಬಸವನಹಳ್ಳಿ ಠಾಣೆಯಲ್ಲಿ ಐದು, ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಕೇಸ್ ದಾಖಲಾಗಿವೆ.
ಅನುಮತಿ ಇಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದು, ಬೈಕ್, ಟೈರ್ ಸುಟ್ಟಿದ್ದು, ಹೆದ್ದಾರಿ ತಡೆ, ಸಾರ್ವಜನಿಕರ ಶಾಂತಿಗೆ ಭಂಗ ಮತ್ತು ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಗುರುವಾರ ಮಧ್ಯಾಹ್ನ ವಿಧಾನ ಪರಿಷತ್ ಗದ್ದಲದಿಂದ ಕೂಡಿತ್ತು. ಆಡಳಿತ ಮತ್ತು ವಿರೋಧ ಪಕ್ಷದವರ ನಡುವೆ ವಾಗ್ಯುದ್ಧ ನಡೆದಿತ್ತು. ವಾಗ್ವಾದದ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿ ಎಂಎಲ್ಸಿ ಸಿ ಟಿ ರವಿ ಅವರಿಗೆ ಕೊಲೆಗಾರ ಎಂದು ನಿಂದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿ ಟಿ ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಸಿ ಟಿ ರವಿಯಂಥವರಿಗೆ ಮಹಿಳೆಯರನ್ನು ಅಪಮಾನಿಸೋದು ಮನುವಾದಿ ವ್ಯಸನ
ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಅದೇ ದಿನ ಸಂಜೆ 6 ಗಂಟೆ ಸುಮಾರಿಗೆ ಸಿಟಿ ರವಿಯವರನ್ನು ಬಂಧಿಸಿದ್ದರು.
ಸಿ ಟಿ ರವಿ ಬಂಧನ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆ ಮತ್ತು ಸಾರ್ವಜನಿಕ ಶಾಂತಿ ಭಂಗವಾಗಿದೆ ಎಂದು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸದ್ಯ ಸಿ ಟಿ ರವಿ ಅವರಿಗೆ ಹೈಕೋರ್ಟ್ ಬಿಡುಗಡೆಗೆ ಆದೇಶಿಸಿದೆ. ಸಿ ಟಿ ರವಿಯವರನ್ನು ಬಂಧಿಸಿ ಬೆಂಗಳೂರಿಗೆ ಕಾರಿನಲ್ಲಿ ಕರೆದುಕೊಂಡು ಬರುತ್ತಿರುವಾಗಲೇ, ಹೈಕೋರ್ಟ್ ಆದೇಶ ಹೊರಬಿದ್ದಿತ್ತು. ಸಿ ಟಿ ರವಿಯವರ ಬಂಧನ ವಿರೋಧಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
