ಗ್ರಾಮೀಣ ಭಾಗದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯಿಂದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ತಾಲೂಕಿನ ಗ್ರಾಮಗಳಲ್ಲಿರುವ ಹಲವು ಸಮಸ್ಯೆಗಳ ಕುರಿತು ಅನೇಕ ಬಾರಿ ಮನವಿ ಪತ್ರಗಳನ್ನು ಸಲ್ಲಿಸಲಾಗಿದ್ದು, ಆದರೆ ಈವರೆಗೂ ಶಾಸಕರಿಂದಾಗಲಿ, ಸಂಬಂಧಪಟ್ಟ ಅಧಿಕಾರಿಗಳಿಂದಾಗಲಿ ಸಮಸ್ಯೆಗಳಿಗೆ ಸ್ಪಂದನೆ ಸಿಕ್ಕಿಲ್ಲ, ಕೂಡಲೇ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.
ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕ ಕುಟುಂಬಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಗ್ರಾಮಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸದೇ ಸ್ಥಗಿತವಾಗಿವೆ. ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜೊತೆಗೆ ಗ್ರಾಮಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ನಿರಾವರಿ ಸೌಲಭ್ಯವನ್ನು ಕಲ್ಪಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗುರುರಾಜ, ಹುಚ್ಚಮ್ಮ, ಮಾರೆಮ್ಮ, ಬಸವರಾಜ, ಹುಚ್ಚಪ್ಪ ಸೇರಿದಂತೆ ಇತರರಿದ್ದರು.
