ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಅವಹೇಳನಕಾರಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಚಂಡೀಗಢ ನಗರ ಪಾಲಿಕೆಯಲ್ಲಿ ಕಾಂಗ್ರೆಸ್, ಎಎಪಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ. ಈ ನಿರ್ಣಯದ ವಿರುದ್ಧ ಬಿಜೆಪಿ ಸದಸ್ಯರು ಹೌಹಾರಿದ್ದು, ಕಾಂಗ್ರೆಸ್, ಎಎಪಿ ಮತ್ತು ಬಿಜೆಪಿ ನಡುವೆ ಪಾಲಿಕೆಯಲ್ಲಿಯೇ ಘರ್ಷಣೆ ನಡೆದಿದೆ. ಪಾಲಿಕೆಉಯ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಹೊಡೆದಾಡಿಕೊಂಡಿದ್ದಾರೆ.
ಪಾಲಿಕೆಯ ಆಡಳಿತಾರೂಢ ಕಾಂಗ್ರೆಸ್ ಮತ್ತು ಎಎಪಿ ಸದಸ್ಯರು ಅಮಿತ್ ಶಾ ವಿರುದ್ಧ ನಿರ್ಣಯ ಅಂಗೀಕರಿಸಿದರೆ, ಪ್ರತಿಯಾಗಿ ಬಿಜೆಪಿಗರು ನೆಹರು ಕಾಲದಿಂದಲೂ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಅಗೌರವಿಸಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, “ಅಮಿತ್ ಶಾ ವಿರುದ್ಧ ಕಾಂಗ್ರೆಸ್ ‘ಸುಳ್ಳು ಅಭಿಯಾನ’ ನಡೆಸುತ್ತಿದೆ. ಅಂಬೇಡ್ಕರ್ ಅವರ ಪರಂಪರೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಬೂಟಾಟಿಕೆಯಲ್ಲಿ ಕಾಂಗ್ರೆಸ್ ತೊಡಗಿದೆ. ಅಂಬೇಡ್ಕರ್ ಅವರ ಜೀವಿತಾವಧಿಯಲ್ಲಿ ಅವರನ್ನು ಅವಮಾನಿಸುತ್ತಿದ್ದ ಕಾಂಗ್ರೆಸ್, ಈಗ ಅವರನ್ನು ಗೌರವಿಸುವಂತೆ ನಟಿಸುತ್ತಿದೆ” ಎಂದು ಆರೋಪಿಸಿದೆ.
#WATCH | Scuffle erupted between Congress and BJP councillors over the subject of Dr BR Ambedkar during the general house meeting of Chandigarh Municipal Corporation today
— ANI (@ANI) December 24, 2024
Nominated councillor Anil Masih had targeted Congress and stated that Rahul Gandhi is out on bail, citing… pic.twitter.com/iZmLidgbT0
ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, “ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸಲು ಕಾಂಗ್ರೆಸ್ ‘ಅಂಬೇಡ್ಕರ್ ಸಮ್ಮಾನ್ ಸಪ್ತಾಹ’ ಆರಂಭಿಸಿದೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಂಬೇಡ್ಕರ್ ಅವರ ಪರಂಪರೆಯನ್ನು ಎತ್ತಿ ಹಿಡಿಯಲು ಮೆರವಣಿಗೆಗಳು ಮತ್ತು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದಾರೆ. ಬಿಜೆಪಿ ಅಂಬೇಡ್ಕರ್ ಅವರ ಆಶಯಗಳನ್ನು ಬುಡಮೇಲು ಮಾಡುತ್ತಿದೆ. ಸಂವಿಧಾನವನ್ನೇ ಬದಲಾಯಿಸುವ ಹುನ್ನಾರದೊಂದಿಗೆ ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡುತ್ತಿದೆ. ಅಮಿತ್ ಶಾ ಕ್ಷಮೆಯಾಚಿಸಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದೆ.
ಪಾಲಿಕೆಯಲ್ಲಿ ಆರೋಪ-ಪ್ರತ್ಯಾರೋಪಗಳಿಗೆ ಸದಸ್ಯರ ನಡುವೆ ವಾಗ್ವಾದ ನಡೆದಿದ್ದು, ಪರಸ್ಪರ ಕೈ-ಕೈ ಮಿಲಾಯಿಸಿದ್ದು, ಹೊಡೆದಾಡಿಕೊಂಡಿದ್ದಾರೆ.