ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ಕಿರುಕಿಳದಂತಹ ದೌರ್ಜನ್ಯಗಳಿಗೆ ಒಳಗಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಯಾವುದೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ.
ದೆಹಲಿಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿದ್ದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಡೆಸಿವೆ. ಈ ವೇಳೆ, ಸಂತ್ರಸ್ತ ಬಾಲಕಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸಿವೆ ಎಂಬ ವಿಚಾರವನ್ನೂ ಹೈಕೋರ್ಟ್ ಗಮನಿಸಿದೆ. ಈ ಹಿನ್ನೆಲೆಯಲ್ಲಿ, “ಅತ್ಯಾಚಾರ, ಆ್ಯಸಿಡ್ ದಾಳಿ ಹಾಗೂ ಇತರ ಗಂಭೀರ ಸ್ವರೂಪ ದೌರ್ಜನ್ಯಗಳಿಗೆ ಒಳಗಾದ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸುವುದು ಎಲ್ಲ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್ಗಳು, ವೈದ್ಯಕೀಯ ಕೇಂದ್ರಗಳ ಕರ್ತವ್ಯವಾಗಿದೆ. ಸಂತ್ರಸ್ತರಿಗೆ ಚಿಕಿತ್ಸೆ ಮತ್ತು ಆರೈಕೆ ಒದಗಿಸಲು ವೈದ್ಯಕೀಯ ಸಂಸ್ಥೆಗಳು ನಿರಾಕರಿಸುವಂತಿಲ್ಲ” ಎಂದು ನ್ಯಾಯಾಲಯ ಹೇಳಿದೆ.
“ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಸಂತ್ರಸ್ತೆಯರಿಗೆ ಗುರುತಿನ ಚೀಟಿ ನೀಡುವಂತೆ ವೈದ್ಯಕೀಯ ಸಂಸ್ಥೆಗಳು ಒತ್ತಾಯಿಸಬಾರದು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಲು ನಿರಾಕರಿಸುವುದು ಅಪರಾಧ. ಒಂದು ವೇಳೆ, ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿ ನಿರಾಕರಿಸಿದರೆ, ಅಂತವರಿಗೆ ದಂಡ ವಿಧಿಸಬಹುದು” ಎಂದು ದೆಹಲಿ ಹೈಕೋರ್ಟ್ ಹೇಳಿದೆ.