ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸರ್ಕಾರಿ ಯೋಜಿತ ಆತ್ಮಹತ್ಯೆ ಎಂದು ಕರೆದಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷ ಆಗ್ರಹಿಸಿದೆ.
ಇದನ್ನು ಓದಿದ್ದೀರಾ? ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್
“ಸಚಿವರ, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಸರಣಿ ಆತ್ಮಹತ್ಯೆಗಳು ನಡೆದಿರುವುದನ್ನು ಹಿಂದೆಂದೂ ನಾವು ಕೇಳಿಲ್ಲ, ನೋಡಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ಕಂಡುಬರುತ್ತಿದೆ. ರಾಜ್ಯ ಸರ್ಕಾರ ‘ಆತ್ಮಹತ್ಯೆ ಭಾಗ್ಯ’ವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ” ಎಂದು ಟೀಕಿಸಿದರು.
“ಡೆತ್‌ನೋಟ್‌ನಲ್ಲಿ ಎಳೆಎಳೆಯಾಗಿ ಎಲ್ಲಾ ಮಾಹಿತಿಯನ್ನು ಬಿಚ್ಚಿಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬರೆದ ಡೆತ್‌ನೋಟ್ ಆತನೇ ಬರೆದಿರುವುದಾದರೆ ಅದರಲ್ಲಿ ಇರುವ ಅಂಶಗಳು ಎಂದಿಗೂ ಸುಳ್ಳಾಗಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಿಸಿದರು.
ಇದನ್ನು ಓದಿದ್ದೀರಾ? ಬೀದರ್ | ಗುತ್ತಿಗೆದಾರ ಸಚಿನ್ ಆತ್ಮಹತ್ಯೆ : ಸಿಬಿಐ ತನಿಖೆಗೆ ಒಪ್ಪಿಸಲು ಬಿ.ವೈ.ವಿಜಯೇಂದ್ರ ಆಗ್ರಹ
ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ರಾಜು ಕಪನೂರು ಅವರು, ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಆರೋಪಿ ಇದ್ದ ಫೋಟೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಿಡುಗಡೆ ಮಾಡಿದರು. ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಇದೇ ಸಂದರ್ಭದಲ್ಲಿ ವಿಜಯೇಂದ್ರ ಆಗ್ರಹಿಸಿದರು. ಹಾಗೆಯೇ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡದಿದ್ದರೆ ಜನವರಿ 4 ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಇನ್ನು ನಿನ್ನೆ (ಭಾನುವಾರ) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಸಂಜೆ ಸಚಿನ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದೆ.
