ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಬಂದಿದ್ದ ವೇಳೆ ನ್ಯಾಯಾಲಯದ ಆವರಣದಲ್ಲೇ ಕುಟುಂಬವೊಂದರ ಸದಸ್ಯರ ಮೇಲೆ ಗಂಭೀರ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಡಿ.30ರ ಸೋಮವಾರ ನಡೆದಿದೆ.
ಸೋಮವಾರ ಬೆಳಗ್ಗೆ ಪಟ್ಟಣದ ಕೋರ್ಟ್ ಎದುರಿನ ರಸ್ತೆಯಲ್ಲಿ ವಿಚಾರಣೆಗೆ ಹಾಜರಾಗಲು ಆಗಮಿಸುತ್ತಿದ್ದ ಕುಟುಂಬವೊಂದರ ಮೇಲೆ ಸಿನಿಮೀಯ ಶೈಲಿಯಲ್ಲಿ ದಾಳಿಯ ಘಟನೆ ನಡೆದಿದ್ದು, ಸಾರ್ವಜನಿಕರ ಸಾಹಸದಿಂದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಹೋಬಳಿ ಸಮೀಪದ ಅಂಕನಹಳ್ಳಿ ಗ್ರಾಮದ ಕುಟುಂಬವು ಕೌಟುಂಬಿಕ ಕಲಹದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಘಟನೆಯ ಸಂಬಂಧ ದಿನೇಶ್ ಎಂಬಾತ ಹಲ್ಲೆಯ ಸೂತ್ರಧಾರ ಎಂದು ತಿಳಿದುಬಂದಿದ್ದು, ಅನೇಕ ಅಪರಿಚಿತ ಕಿಡಿಗೇಡಿಗಳ ಗುಂಪು ಸಾಕ್ಷಿ ಹೇಳಲು ಬಂದಿದ್ದ ಕುಟುಂಬದ ಮೇಲೆ ದಾಳಿ ಮಾಡಿದೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪ ತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದಾಳಿಗೆ ಕೌಟುಂಬಿಕ ಕಲಹ ಕಾರಣವಾಗಿದ್ದು, ಸಂಬಂಧಿತ ಪ್ರಕರಣದ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಘಟನೆ ಸಂಬಂಧ ತನಿಖೆ ಮುಂದುವರಿದಿದ್ದು, ಹಲ್ಲೆಕೋರರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

