ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿದೆ. ವಿಪಕ್ಷಗಳ ಈ ಬೇಡಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ದಲಿತ ನಾಯಕ, ಅವರು ರಾಜೀನಾಮೆ ನೀಡಲ್ಲ ಎಂದು ತಿಳಿಸಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಬಿಜೆಪಿಯ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ತಿಳಿದಿದೆ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಗುತ್ತಿಗೆದಾರ ಸಚಿನ್ ಆತ್ಮಹತ್ಯೆ | ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
“ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ನಮಗೆ ತಿಳಿದಿದೆ, ತನಿಖೆ ನಡೆಯುತ್ತಿದೆ. ಯಾರೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಪ್ರಿಯಾಂಕ್ ಖರ್ಗೆ ನಮ್ಮ ದಲಿತ ನಾಯಕ. ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದು ಸಾಧ್ಯವಿಲ್ಲ. ಸಿಬಿಐ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನಮಗೆ ತಿಳಿದಿದೆ. ನಮ್ಮ ಪೊಲೀಸರು ಮತ್ತು ಅಧಿಕಾರಿಗಳು ತನಿಖೆ ಮಾಡಲು ಸಮರ್ಥರಾಗಿದ್ದಾರೆ” ಎಂದು ತಿಳಿಸಿದರು.
ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿರುವ ಕಾರಣ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ಆಗ್ರಹಿಸಿದೆ. ಆದರೆ “ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ, ನಾನು ಮಾತ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಹಾಗೆಯೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂಬುದು ವಿಪಕ್ಷಗಳ ಆಗ್ರಹವಾಗಿದೆ.
