ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ. ಬಯ್ಯಾರೆಡ್ಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
“ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದುಃಖಿತನಾಗಿದ್ದೇನೆ. ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
“ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರು, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರೂ ಆಗಿದ್ದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ರಾಜ್ಯದಲ್ಲಿ ರೈತ, ಕಾರ್ಮಿಕ ಹೋರಾಟಗಳನ್ನು ಕಟ್ಟುವಲ್ಲಿ ಮುಂಚೂಣಿಯಲ್ಲಿದ್ದ ಅವರು, ಅನೇಕ ಜನಪರ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನನ್ನೊಂದಿಗೂ ಹೋರಾಟಗಳಲ್ಲಿ ಭಾಗಿಯಾಗಿದ್ದರು. ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.
ಎಂ ಬಿ ಪಾಟೀಲ್ ಸಂತಾಪ
“ಬಯ್ಯಾರೆಡ್ಡಿ ಅವರು ಎಡಪಂಥೀಯ ಹಾದಿಯಲ್ಲಿ ರೈತರು ಮತ್ತು ಕಾರ್ಮಿಕರ ಹೋರಾಟಗಳನ್ನು ಸಂಘಟಿಸುತ್ತಿದ್ದರು. ದೇವನಹಳ್ಳಿ ಭೂ ಸ್ವಾಧೀನ ಸಂಬಂಧ ಇತ್ತೀಚೆಗೆ ಮುಖ್ಯಮಂತ್ರಿ ಕರೆದಿದ್ದ ಸಭೆಗೂ ಬಂದಿದ್ದರು. ಅವರ ನಿಧನದಿಂದ ಕೃಷಿಕ ಸಮುದಾಯವು ತನ್ನ ಓರ್ವ ಪ್ರಾಮಾಣಿಕ ನೇತಾರನನ್ನು ಕಳೆದುಕೊಂಡಿದೆ. ಈ ಧೀಮಂತರ ನಿಧನದಿಂದ ಉಂಟಾಗಿರುವ ನೋವನ್ನು ಭರಿಸಿಕೊಳ್ಳುವ ಶಕ್ತಿ ಎಲ್ಲರಿಗೂ ಬರಲಿ ಮತ್ತು ಪರಮಾತ್ಮನು ಇವರ ಆತ್ಮಕ್ಕೆ ಶಾಂತಿ ನೀಡಲಿ” ಎಂದು ಸಚಿವ ಎಂ ಬಿ ಪಾಟೀಲ್ ಪ್ರಾರ್ಥಿಸಿದ್ದಾರೆ.
ಕರ್ನಾಟಕ ಪ್ರಾಂತ ರೈತ ಸಂಘ(KPRS) ರಾಜ್ಯ ಸಮಿತಿ ಅಧ್ಯಕ್ಷರಾದ ಕಾಂ. ಜಿಸಿ ಬಯ್ಯಾರೆಡ್ಡಿ ರವರ ನಿಧನದಿಂದ ರಾಜ್ಯದ ರೈತ ಚಳುವಳಿಗೆ ಹಾಗೂ ಐಕ್ಯ ಹೋರಾಟಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಕಂಬನಿ ಮಿಡಿದಿದೆ.