ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಮೈಸೂರು ಬಂದ್ ಭಾಗಶಃ ಯಶಸ್ವಿಯಾಗಿದೆ.
ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹಾಗೂ ಮಾಜಿ ಮಹಾಪೌರ ಪುರುಷೋತ್ತಮ್ ಅವರ ನೇತೃತ್ವದಲ್ಲಿ ಮೈಸೂರಿನ ಸಬ್ ಅರ್ಬನ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನಾಕಾರರು ಜಮಾಯಿಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಅಮಿತ್ ಶಾ ದೇಶವ್ಯಾಪಿ ಆಕ್ರೋಶಕ್ಕೆ ಕಾರಣರಾಗಿದ್ದರು. ಅವರ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿಯೂ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್‌ಗೆ ಬೆಂಬಲ ಸೂಚಿಸಿದರು. ಬಂದ್ ಪರಿಣಾಮ ಬಸ್ ಸಂಚಾರ ಅಸ್ತವ್ಯಸ್ತವಾಗಿ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.
ಈ ಸುದ್ದಿ ಓದಿದ್ದೀರಾ?: ಬೀದರ್ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ
ಬ್ಯಾಂಕ್, ಸರ್ಕಾರಿ ಕಚೇರಿಗಳು ಎಂದಿನಂತೆ ಕೆಲಸ ನಿರ್ವಹಣೆ ಮಾಡಿವೆ. ಶಾಲೆ ಕಾಲೇಜುಗಳಿಗೆ ರಜೆ ನೀಡಿರಲಿಲ್ಲ. ಆದರೆ ಕೆಲವು ಶಾಲೆ ಕಾಲೇಜು ಮಕ್ಕಳ ಹಾಜರಾತಿ ಅನುಸಾರ ರಜೆ ನೀಡುವ ತೀರ್ಮಾನ ಕೈಗೊಂಡಿದ್ದವು.
