ಉತ್ತರ ಪ್ರದೇಶದ ಕನ್ನೌಜ್‌ನ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಶನಿವಾರ ಮಧ್ಯಾಹ್ನ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪರಿಹಾರ ಮತ್ತು ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈವರೆಗೆ, 15 ಕಾರ್ಮಿಕರನ್ನು ರಕ್ಷಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಭವಿಸಿದ ಸಮಯದಲ್ಲಿ ಕಟ್ಟಡದಲ್ಲಿ ಸುಮಾರು 30–35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇನ್ನೂ, ಸುಮಾರು 25 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಉತ್ತರ ಪ್ರದೇಶದ ಸಮಾಜ ಕಲ್ಯಾಣ ಸಚಿವ ಅಸೀಮ್ ಅರುಣ್ ಭೇಟಿ ನೀಡಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಎಲ್ಲರನ್ನು ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
“ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದಾದ ಎಲ್ಲರನ್ನು ರಕ್ಷಿಸುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ. ಅವಶೇಷಗಳನ್ನು ತೆರವುಗೊಳಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಈವರೆಗೆ ರಕ್ಷಿಸಲ್ಪಟ್ಟ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ನಿಜವಾದ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ” ಎಂದು ತಿಳಿಸಿದ್ದಾರೆ.
“ರಕ್ಷಿಸಲಾದ ಎಲ್ಲ ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ” ಎಂದು ಕಾನ್ಪುರ ನ್ಸ್‌ಪೆಕ್ಟರ್ ಜನರಲ್ (ಐಜಿ) ಜೋಗೇಂದ್ರ ಕುಮಾರ್ ಹೇಳಿದ್ದಾರೆ.