ಷೇರುಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂಬ ವಾಟ್ಸ್ಯಾಪ್ ಸಂದೇಶ ಕಳುಹಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸುಳ್ಳು ವಾಟ್ಸ್ಯಾಪ್ ಮೆಸೇಜ್ ನೋಡಿ ವ್ಯಕ್ತಿಯೊಬ್ಬರು ಹಂತ ಹಂತವಾಗಿ ₹77,96,322.08 ಹಣ ಪಾವತಿಸಿದ್ದರು. ಆದರೆ ಆರೋಪಿಗಳು ಲಾಭಾಂಶ ನೀಡದೆ ವಂಚಿಸಿದ್ದರು. ಈ ಬಗ್ಗೆ ಹಣ ಕಳೆದುಕೊಂಡ ವ್ಯಕ್ತಿಯು ಸೆನ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಮಂಗಳೂರು | ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಶವಾಗಾರದಲ್ಲಿ ಜೀವಂತ!
ವ್ಯಕ್ತಿಯಿಂದ ಪಾವತಿಯಾಗಿದ್ದ ಹಣದ ವಿವರಕ್ಕೆ ಸಂಬಂಧಿಸಿ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಗೆ ₹26,27,114.4 ವರ್ಗಾವಣೆಯಾಗಿತ್ತು. ಬಳಿಕ ಈ ಖಾತೆಯಿಂದ ಉಮರ್ ವಲಿಯ ಪರಂಬತ್ ಎಂಬಾತನ ಬ್ಯಾಂಕ್ ಖಾತೆಗೆ ₹6 ಲಕ್ಷ ಪಾವತಿಯಾದುದು ಬೆಳಕಿಗೆ ಬಂದಿತ್ತು. ತನಿಖೆ ಕೈಗೊಂಡಾಗ ರಿಯಾಝ್ ಎಂ ವಿ ಎಂಬಾತ ಹಣವನ್ನು ವರ್ಗಾವಣೆ ಮಾಡಿಸಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
