ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟದ ನಡುವೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಸಂಬಂಧ ಸ್ವತಃ ವಿ. ಸುನೀಲ್ ಕುಮಾರ್ ಅವರೇ ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!
ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬಣಗಳ ನಡುವಿನ ವಿರಸ ಹೆಚ್ಚಾಗಿದ್ದು,ನಾಯಕರುಗಳು ತಮ್ಮ ತಮ್ಮಲ್ಲೇ ವಾಗ್ದಾಳಿ ಮುಂದುವರಿಸಿದ್ದಾರೆ. ಈ ಮಧ್ಯ ಪಕ್ಷದಲ್ಲಿ ಇಂತಹದ್ದೊಂದು ಬೆಳವಣಿಗೆ ನಡೆದಿದೆ.
ಈ ಹಿಂದೆ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಹುದ್ದೆಯಿಂದ ಇಳಿದ ಬಳಿಕ ಹೈಕಮಾಂಡ್ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿತ್ತು.ಅದರಂತೆ ಸುನಿಲ್ ಕುಮಾರ್ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ದರು. ಆದರೆ ಸುನಿಲ್ ಕುಮಾರ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ಮುಂದಾಗಿದೆ ಎನ್ನಲಾಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದು, ಇದಕ್ಕೂ ಮುಂಚೆ ಮೌಖಿಕವಾಗಿ ಕೋರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಪಕ್ಷದ ಬಣ ಬಡಿದಾಟ ಕಾರಣವಲ್ಲ, ವೈಯಕ್ತಿಕ ಕಾರಣಕ್ಕೆ ಪ್ರ‍್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಾಮಾನ್ಯವಾಗಿ ನಾಲ್ವರು ಪ್ರಮುಖರನ್ನು ಮಾತ್ರ ನಿಯೋಜನೆ ಮಾಡಲಾಗುತ್ತದೆ. ಸದ್ಯ ಸುನೀಲ್ ಕುಮಾರ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ ಹಾಗೂ ಪಿ.ರಾಜೀವ್ ಈ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.
