ಆರ್ಜಿ ಕರ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ನಾತಕೋತ್ತರ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ಗೆ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ
ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಮೂರ್ತಿಗಳಾದ ಅನಿರ್ಬನ್ ದಾಸ್ ಶತಕ್ಷೆಯ ತೀರ್ಪನ್ನು ಪ್ರಕಟಿಸಿದರು. ಸಂತ್ರಸ್ತ ಕುಟುಂಬಕ್ಕೆ ರಾಜ್ಯ ಸರ್ಕಾರ 17 ಲಕ್ಷ ರೂ. ಪರಿಹಾರ ನೀಡಬೇಕೆಂದು ಕೋರ್ಟ್ ನಿರ್ದೇಶಿಸಿತು.
ನ್ಯಾಯಾಲಯದ ಅಂತಿಮ ವಿಚಾರಣೆಯ ಸಂದರ್ಭದಲ್ಲಿ ಆರೋಪಿಯು ತಾನು ಯಾವುದೇ ಕೃತ್ಯವೆಸಗಿಲ್ಲ, ತನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿದ್ದ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ತೀರ್ಪನ್ನು ಪ್ರಕಟಿಸಿದರು.
“ಇದು ಅಪರೂಪದಲ್ಲಿ ಅಪರೂಪ ಪ್ರಕರಣವಲ್ಲದ ಕಾರಣ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದೇನೆ” ಎಂದು ನ್ಯಾಯಾಧಿಶರು ತೀರ್ಪಿನ ಸಂದರ್ಭದಲ್ಲಿ ಪ್ರಕಟಿಸಿದರು.
ಸಿಬಿಐ ಪರ ವಾದ ಮಂಡಿಸಿದ ವಕೀಲರು ಅಪರೂಪದಲ್ಲಿ ಅಪರೂಪವಾದ ಪ್ರಕರಣವಾದ ಕಾರಣ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!
ನ್ಯಾಯಾಲಯ ಆದೇಶದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿತ್ತು. ಈ ನಡುವೆ ಕೊನೆ ಕ್ಷಣದಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಿರುವ ಸಂತ್ರಸ್ತೆ ಪೋಷಕರು, ನ್ಯಾಯಕ್ಕಾಗಿ ಹೋರಾಟವನ್ನು ಮುಂದುವರೆಸುವುದನ್ನು ಕೈ ಬಿಡದಂತೆ ತಿಳಿಸಿದ್ದಾರೆ.
ಕಳೆದ ಆಗಸ್ಟ್ನಲ್ಲಿ ನಡೆದ ಈ ಭೀಕರ ಘಟನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗಿತ್ತು.
ಆಗಸ್ಟ್ 9ರಂದು ರಾಜ್ಯ ಸರ್ಕಾರಿ ಆಸ್ಪತ್ರೆಯ ಸ್ನಾತಕೋತ್ತರ ಟ್ರೈನಿ ಮೇಲೆ ನಡೆದ ಈ ಅಪರಾಧ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣದ ವಿಚಾರಣೆಯು ನವೆಂಬರ್ 12ರಿಂದ ಪ್ರಾರಂಭವಾಗಿದ್ದು, 50 ಸಾಕ್ಷ್ಯಗಳನ್ನು ವಿಚಾರಣೆ ನಡೆಸಲಾಗಿದೆ. ಜನವರಿ 9ರಂದು ರಾಯ್ ವಿಚಾರಣೆ ಮುಕ್ತಾಯಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಮೃತ ವೈದ್ಯರ ತಂದೆ, ಸಿಬಿಐ ತನಿಖಾಧಿಕಾರಿ, ಕೋಲ್ಕತ್ತಾ ಪೊಲೀಸ್ ತನಿಖಾಧಿಕಾರಿ, ವಿಧಿವಿಜ್ಞಾನ ತಜ್ಞರು ಮತ್ತು ಮೃತರ ಕೆಲವು ಸಹಪಾಠಿಗಳು ಪ್ರಕರಣದಲ್ಲಿ ಸಾಕ್ಷ್ಯ ನೀಡಿದ್ದಾರೆ.
