ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ಬಳಿ ಕರ್ನಾಟಕ ಸಾಂಸ್ಕ್ರತಿಕ ನಾಯಕ ವಿಶ್ವಗುರು ಬಸವಣ್ಣನವರ ಪ್ರತಿಮೆ ವಿರೂಪಗೊಳಿಸಿರುವುದನ್ನು ಖಂಡಿಸಿ ಬಸವಪರ ಸಂಘಟನೆಗಳ ಒಕ್ಕೂಟದ ಪ್ರಮುಖರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೀದರ್ ನಗರದ ಬಸವೇಶ್ವರ ವೃತ್ತದಿಂದ ಮಹಾವೀರ ವೃತ್ತ, ಛತ್ರಪತಿ ಶಿವಾಜಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದರು.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.
‘ಜಗತ್ತಿಗೆ ಶಾಂತಿ, ಸಮಾನತೆ ಹಾಗೂ ಮಾನವೀಯತೆ ಸಂದೇಶವನ್ನು ನೀಡಿದ ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವುದು ಖಂಡನಾರ್ಹ. ಈ ಕೃತ್ಯ ನಾಡಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮೌಲ್ಯಗಳಿಗೆ ಧಕ್ಕೆ ಮಾಡಿದೆ. ಸಮಾಜದ ಭಾವನೆಗಳಿಗೆ ಧಕ್ಕೆಯಾಗಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
‘ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕೃತ್ಯದಲ್ಲಿ ತೊಡಗಿರುವ ಆರೋಪಿಗಳನ್ನು ಪತ್ತೆ ಹಚ್ಚಿ, ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಕೃತ್ಯಗಳು ಪುನಃ ನಡೆಯದಂತೆ ಭದ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಹಾಸನ | ಆನ್‌ಲೈನ್ ಗೇಮಿಂಗ್; ಲಕ್ಷಾಂತರ ಹಣ ಕಳೆದುಕೊಂಡ ಯುವಕ ಅತ್ಮಹತ್ಯೆ
ಪ್ರತಿಭಟನೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಧನ್ನೂರ, ಬಸವ ಸೇವಾ ಪ್ರತಿಷ್ಠಾನದ ಗಂಗಾಂಬಿಕೆ ಅಕ್ಕ, ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ, ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷ ಬಾಬುವಾಲಿ, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ, ಯುವ ಬಸವ ದಳದ ಜಿಲ್ಲಾಧ್ಯಕ್ಷ ಗಣೇಶ ಬಿರಾದಾರ, ಯುವ ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಶಕುಂತಲಾ ಬೆಲ್ದಾಳೆ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ ಭತಮುರ್ಗೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.