ಉತ್ತರ ಪ್ರದೇಶದ ಸಹರಾನ್ ಪುರ ಜಿಲ್ಲೆಯ ನವಾಡಾದಲ್ಲಿ ದರೋಡೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಓರ್ವ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮುಹಮ್ಮದ್ ಸಲ್ಮಾನ್(27) ಥಳಿತಕ್ಕೊಳಗಾಗಿ ಮೃತಪಟ್ಟ ಯುವಕ. ಸಲ್ಮಾನ್ ನನ್ನು ತಲೆಕೆಳಗಾಗಿ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಸಲ್ಮಾನ್ ಸ್ನೇಹಿತ ಮೊಹಮ್ಮದ್ ರಫೀದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವಾಡಾ ಗ್ರಾಮದ ರಾಜ್ ಕುಮಾರ್ ಎಂಬಾತನ ಮನೆಯಲ್ಲಿ ದರೋಡೆ ಮಾಡಲು ಯತ್ನಿಸಿದ ಆರೋಪದಲ್ಲಿ ಗ್ರಾಮಸ್ಥರು ಸಲ್ಮಾನ್ ನನ್ನು ಕ್ರೂರವಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್
ಮರಣೋತ್ತರ ಪರೀಕ್ಷೆಯ ನಂತರ ಅವರ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ಸಮಗ್ರವಾಗಿ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಹರಾನ್ ಪುರ ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಜೈನ್ ಹೇಳಿದ್ದಾರೆ.
ದರೋಡೆಗೆ ಯತ್ನ ಆರೋಪದಲ್ಲಿ ಮೃತ ಸಲ್ಮಾನ್ ಮತ್ತು ಆತನ ಸ್ನೇಹಿತನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ, ಸಲ್ಮಾನ್ ಗೆ ಕ್ರೂರವಾಗಿ ಥಳಿಸಿದ ಗುಂಪಿನ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಥಳಿತದ ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ.
