ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚಿಸಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಬಿಎಂ ಆರ್ ಡಿ ಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
“2014 ರಿಂದ ಇಲ್ಲಿಯ ತನಕ ಅಂದರೆ 11 ವರ್ಷಗಳಿಂದ ನಗರದಲ್ಲಿ ನೀರಿನ ಬಿಲ್ ಅನ್ನು ಹೆಚ್ಚಳ ಮಾಡಿಲ್ಲ. ಈ ಕಾರಣಕ್ಕೆ ಬಿಡ್ಬ್ಯೂಎಸ್ಎಸ್ ಬಿಗೆ ವರ್ಷಕ್ಕೆ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿಯಾಗುತ್ತಿತ್ತು. ಈ ಬಾರಿ 75 ಕೋಟಿಯಾಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ತಿಂಗಳಿಗೆ 85 ಕೋಟಿ ಹಣ ನಷ್ಟವಾಗುತ್ತಿದೆ” ಎಂದರು.
ಬೆಲೆ ಹೆಚ್ಚಳದ ಅನಿವಾರ್ಯತೆ ಎದುರಾಗಿದೆ
“ನೀರಿನ ಬಿಲ್ ಹೆಚ್ಚಳ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಕಾರಣಕ್ಕೆ ನಗರದ ಎಲ್ಲ ಶಾಸಕರ ಬಳಿ ಹೋಗಿ ಮಂಡಳಿಯವರು ಚರ್ಚೆ ನಡೆಸಿದ್ದಾರೆ. ಅಲ್ಲದೇ ನೀರಿನ ಜಾಲ ವಿಸ್ತರಣೆ ಮಾಡುವ ಸಲುವಾಗಿ ಅನೇಕ ಬ್ಯಾಂಕ್ ಗಳ ಬಳಿ ಸಾಲ ಕೇಳಲೂ ಆಗುತ್ತಿಲ್ಲ. ಬ್ಯಾಂಕ್ ಅವರು ಮಂಡಳಿ ನಷ್ಟದಲ್ಲಿದೆ ನಾವು ಸಹಾಯ ಮಾಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಹಣ ನೀಡುತ್ತಿರುವ ಜೈಕಾ ಸಂಸ್ಥೆ ಸೇರಿದಂತೆ ಹಲವಾರು ಸಂಸ್ಥೆಗಳು ನೆರವು ಬೇಕು ಎಂದಾದರೆ ಹಣ ವಾಪಸಾತಿಯ ಬಗ್ಗೆ ಭರವಸೆ ನೀಡಿ ಎಂದು ತಿಳಿಸುತ್ತಿದ್ದಾರೆ” ಎಂದರು.
ಬಡವರಿಗೆ ನೀರು ನೀಡಿದರೂ ಲೆಕ್ಕ ಬೇಕು
“ಈ ಹಿಂದೆ ಕೊಳೆಗೇರಿ ಹಾಗೂ ಬಡವರ ಉಪಯೋಗಕ್ಕೆ ಸರ್ಕಾರ ರೂ.20 ಕೋಟಿ ಹಣ ಮೀಸಲಿಟ್ಟಿತ್ತು. ಹಿಂದಿನ ಬಿಜೆಪಿ ಸರ್ಕಾರ ಈ ಸಹಾಯಧನವನ್ನು ನಿಲ್ಲಿಸಿತ್ತು. ಇದನ್ನು ಮುಂದುವರೆಸಲಾಗುವುದು. ಬಡವರಿಗೆ ನೀರು ನೀಡಿದರೂ ಸಹ ಅದು ಕೂಡ ಲೆಕ್ಕಕ್ಕೆ ಸಿಗಬೇಕು. 1 ಪೈಸೆ ಹಣ ನೀಡಿಯಾದರೂ ಸಂಪರ್ಕ ನೀಡಬೇಕು. ಯಾರು ಎಷ್ಟು ನೀರು ಪಡೆಯುತ್ತಿದ್ದಾರೆ ಎನ್ನುವ ಲೆಕ್ಕ ಸರ್ಕಾರಕ್ಕೆ ಸಿಗಬೇಕು. ಅನೇಕ ಕಡೆ ಕೊಳೆಗೇರಿ ಹೆಸರಿನಲ್ಲಿ ಉಳ್ಳವರು ನೀರು ಪಡೆಯುತ್ತಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ
ಬೇಸಿಗೆಗೆ ಈಗಿನಿಂದಲೇ ತಯಾರಿ
“ಮುಂಬರುವ ಬೇಸಿಗೆ ವೇಳೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು ಎನ್ನುವ ಸೂಚನೆ ನೀಡಲಾಗಿದೆ. ಜೊತೆಗೆ ಅಂತರ್ಜಲ ಹೆಚ್ಚಳಕ್ಕೆ ಯಾವುದಾದರೂ ಕೆರೆ ತುಂಬಿಸಬೇಕಿದ್ದರೆ ಈ ಕುರಿತು ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.
ಫೆಬ್ರವರಿ ಅಂತ್ಯಕ್ಕೆ ಟನಲ್ ರಸ್ತೆ ಟೆಂಡರ್
“ಸುರಂಗ ರಸ್ತೆ ನಿರ್ಮಾಣಕ್ಕಾಗಿ ರೂ. 17,780 ಕೋಟಿ ಮೊತ್ತದ ಟೆಂಡರ್ ಅನ್ನು ಫೆಬ್ರವರಿ ಅತ್ಯಂದ ವೇಳೆಗೆ ಕರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜೊತೆಗೆ ಮೂರುವರೆ ವರ್ಷಗಳ ಒಳಗಾಗಿ ಮುಗಿಯಬೇಕು ಎಂದು ತಿಳಿಸಿದ್ದೇನೆ. ಎರಡು ಹಂತದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು. ಬಿಬಿಎಂಪಿಯಿಂದಲೂ ಹಣ ನೀಡಲಾಗುವುದು. ಸರ್ಕಾರದಿಂದಲೂ ಅನುದಾನ ನೀಡಲಾಗುವುದು. ಪವರ್ ಫೈನಾನ್ಸ್ ಕಾರ್ಪೋರೇಷನ್, ಹುಡ್ಕೋ ಸೇರಿದಂತೆ ಒಂದಷ್ಟು ಬ್ಯಾಂಕ್ ಗಳು ಸಾಲ ನೀಡಲು ಮುಂದೆ ಬಂದಿವೆ. ಇದಕ್ಕೂ ಹರಾಜು ಪ್ರಕ್ರಿಯೆ ಕರೆಯಲಾಗಿದೆ. ಯಾರು ಕಡಿಮೆ ಬಡ್ಡಿದರಕ್ಕೆ ಹಣ ನೀಡುತ್ತಾರೋ ಅವರಿಗೆ ಅವಕಾಶ ನೀಡಲಾಗುವುದು” ಎಂದು ಹೇಳಿದರು.
