ಕಡಲೆ ಕಾಳು ಖರೀದಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.
2024-25ನೇ ಸಾಲಿಗೆ ಕೇಂದ್ರ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳನ್ನು ಪ್ರತಿ ಕ್ವಿಂಟಾಲಿಗೆ ₹5,650 ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜ.28ರಂದು ನಡೆದ ಸಭೆಯ ನಡವಳಿಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 85 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳನ್ನು ಎಂಎಸ್‌ಪಿ ದರದಲ್ಲಿ ರೈತರಿಂದ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 20 ಕ್ವಿಂಟಾಲ್‌ನಂತೆ ಈಂಕಿ ಗುಣಮಟ್ಟದ ಕಡಲೆ ಕಾಳು ಮಾರಾಟ ಮಾಡಬಹುದಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಗೂಡ್ಸ್ ವಾಹನ – ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು
ಖರೀದಿ ಕೇಂದ್ರಗಳು ಲಾಗಿನ್ ಕ್ರೆಡೆನ್ಸಿಯಲ್ಸ್ ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಂಡು ಕಡಲೆಕಾಳು ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕಡಲೆ ಮಾರಾಟ ಮಾಡುವ ಮೂಲಕ ಈ ಯೋಜನೆ ಲಾಭ ಪಡೆದುಕೊಳ್ಳಲು ಜಿಲ್ಲಾಡಳಿತ ತಿಳಿಸಿದೆ.