ಶನಿವಾರ ಮಂಡನೆಯಾದ ಕೇಂದ್ರ ಬಜೆಟ್ 2025-26ರಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬಿಜೆಪಿಯೇತರ ಸರ್ಕಾರಗಳು ಅಸ್ತಿತ್ವದಲ್ಲಿರುವ ರಾಜ್ಯಗಳನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಈ ನಡುವೆ, ಕರ್ನಾಟಕದ ಕಾಂಗ್ರೆಸ್ ಸಂಸದರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ ನೀಡಲಾಗಿಲ್ಲ ಎಂಬುದನ್ನು ಸಚಿವೆಯ ಗಮನಕ್ಕೆ ತಂದಿದ್ದರೆ.
“ಕರ್ನಾಟಕಕ್ಕೆ ಯಾವುದೇ ರೀತಿಯ ವಿಶೇಷ ಅನುದಾನ ಅಥವಾ ಕೊಡುಗೆಯನ್ನು ನೀಡಲಾಗಿಲ್ಲ. ಈ ಹಿಂದೆ ರಾಜ್ಯಕ್ಕೆ ನಿಗದಿಯಾದ ನಬಾರ್ಡ್ ರೀ ಫೈನಾನ್ಸ್ಅನ್ನು ಕಡಿಮೆಗೊಳಿಸಲಾಗಿದೆ” ಎಂದು ಕಾಂಗ್ರೆಸ್ ಸಂಸದರು ಬೇಸರ ವ್ಯಕ್ತಪಡಿಸಿದ್ದಾರೆ.
ಎಲ್ಐಸಿ ಪ್ರತಿನಿಧಿಗಳ ಬೇಡಿಕೆ, ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಕುರಿತು ಕೇಂದ್ರ ಸರ್ಕಾರವು ವಿಶೇಷ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ವೇಳೆಯಲ್ಲಿ ಸಂಸದರಾದ ಜಿ ಕುಮಾರ ನಾಯಕ, ರಾಜಶೇಖರ್ ಹಿಟ್ನಾಳ್, ಸಾಗರ್ ಖಂಡ್ರೆ, ಶ್ರೇಯಸ್ ಪಾಟೀಲ, ಸುನೀಲ್ ಬೋಸ್, ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಇದ್ದರು.