ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಂದಿಕೇರಾ ಗ್ರಾಮದಲ್ಲಿ ನಡೆದಿದೆ.
ಹಾಲ್ ಗೋರ್ಟಾ ಗ್ರಾಮದ ನಿವಾಸಿ ಸರಿತಾ (31) ಮೃತರು. ಮಹಿಳೆಯು ತವರೂರಾದ ಹಂದಿಕೇರಾ ಗ್ರಾಮದಲ್ಲಿ ತಾಯಿಯೊಂದಿಗೆ ವಾಸವಾಗಿದ್ದರು. ಬಹಿರ್ದೆಸೆಗೆಂದು ಹೊರಗಡೆ ಹೋದಾಗ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹಿಳೆ ರಸ್ತೆ ಪಕ್ಕದ ತಗ್ಗಿನಲ್ಲಿ ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆಗೆ ಮೃತರ ತಾಯಿ ನೀಡಿದ ದೂರಿನ ಮೇರೆಗೆ ಹುಮನಾಬಾದ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.