- ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ದೇವೇಗೌಡ ಆಕ್ರೋಶ - ಕಾಂಗ್ರೆಸ್ ಸರಕಾರದ ಭ್ರಷ್ಟತೆಯಿಂದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಆರೋಪ
ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; “ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, “ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು” ಎಂದು ಪ್ರಶ್ನಿಸಿದ್ದಾರೆ.
“ಕಾಂಗ್ರೆಸ್ ಸರಕಾರ ಯಾವ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರಕಾರ. ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ; ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿದೆ. ಸರಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸರಕಾರದ ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಪತ್ರಿಕಾ ವರದಿಗಳನ್ನು ನಾನು ಸದನದಲ್ಲಿ ಓದಲೇ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಮಾಜಿ ಪ್ರಧಾನಿಗಳ ಭಾಷಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ದೇವೇಗೌಡರ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಕಾಂಗ್ರೆಸ್ ಪಕ್ಷದ ಬಗ್ಗೆ ‘ಶೇಮ್ ಶೇಮ್’ ಎಂದು ಘೋಷಣೆ ಕೂಗಿದರು.
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು
“ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಿನೇ ದಿನೆ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ. ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, ಅಷ್ಟು ಪ್ರಮಾಣದ ನೀರು ಏನೇನಕ್ಕೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು” ಎಂದು ಒತ್ತಾಯ ಮಾಡಿದರು.
“ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದರು. ಆದರೆ ಸಿಂಗ್ ಅವರು ಕೈ ಚೆಲ್ಲಿದ್ದರು. ಆದರೆ, ಈ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಮೋದಿ ಅವರಿಂದ ಸಾಧ್ಯ. ಇದು ನನ್ನ ಬಲವಾದ ನಂಬಿಕೆ” ಎಂದು ಹೇಳಿದರು.