ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು.
ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಕೊಡವ ಮಂದ್‍ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರಿಗೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.
ಕಳೆದ ಐದು ದಿನ 78 ಕಿಲೋಮೀಟರ್ ಕ್ರಮಿಸಿ ಮಡಿಕೇರಿಗೆ ತಲುಪಿದ ಬೃಹತ್ ಪಾದಯಾತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಾಂಪ್ರದಾಯಿಕ ಉಡುಗೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಾಗಿ ಭಾಗಿಯಾಗಿದ್ದರು.
ಇದನ್ನು ಓದಿದ್ದೀರಾ? ಮೈಕ್ರೋ ಫೈನಾನ್ಸ್ ಕಿರುಕುಳ: ಸರ್ಕಾರದ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಕೊಡಗಿನ ವಿವಿಧ ಕಡೆಗಳಿಂದ ಹಾಗೂ ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಮತ್ತಿತರ ಕಡೆಗಳಿಂದ ಹಲವಾರು ಸಂಖ್ಯೆಯಲ್ಲಿ ಕೊಡವರು ಹಾಗೂ ಭಾಷಿಕ ಜನಾಂಗದವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
