- ಕೋವಿಡ್ ತಳಮಟ್ಟದ ಅನುಭವವಿರುವ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಸೇವೆ ಪಡೆಯಲು ಸಲಹೆ
- ರಾಜಾರಾಂ ತಲ್ಲೂರು ಪತ್ರಕ್ಕೆ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಹಠಾತ್ ಸಾವುಗಳ ಕುರಿತಂತೆ ಮತ್ತು ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಇತ್ತೀಚಿಗೆ ಮುಖ್ಯಮಂತ್ರಿಗಳಿಗೆ ಇ-ಮೇಲ್ ಮೂಲಕ ಪತ್ರ ಬರೆದು, ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದೆ. ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ” ಎಂದು ಗಮನ ಸೆಳೆದಿದ್ದರು.
ಮುಂದುವರಿದು, “ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ. ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಕೋರಿದ್ದರು.
ರಾಜಾರಾಂ ತಲ್ಲೂರು ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು “ಪ್ರತ್ಯೇಕ ಟಿಪ್ಪಣಿ ಹೊರಡಿಸಿ, ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು- ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು. ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು.ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಗಳಿಗೆ ಋಣಿ: ರಾಜಾರಾಂ ತಲ್ಲೂರು "ಜನವರಿ 28ರಂದು ನಾನು ಕಳುಹಿಸಿದ್ದ ಇ-ಮೇಲ್ ಆಧರಿಸಿ, ಕರ್ನಾಟಕದ ಮುಖ್ಯಮಂತ್ರಿಯವರು ಮಹತ್ವದ ತೀರ್ಮಾನವೊಂದನ್ನು ತೆಗೆದುಕೊಂಡು, ಈ ಹಠಾತ್ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ಗುರುವಾರ (ಫೆ. 06) ಸೂಚಿಸಿದ್ದಾರೆ" ಎಂದು ಟಿಪ್ಪಣಿಯ ಪ್ರತಿ ಲಗತ್ತಿಸಿ ಸಾಮಾಜಿಕ ಜಾಲತಾಣದಲ್ಲಿ ರಾಜಾರಾಂ ತಲ್ಲೂರು ಪೋಸ್ಟ್ ಮಾಡಿದ್ದಾರೆ. "ರಾಜ್ಯಸರ್ಕಾರ ವಿಳಂಬವಾಗಿಯಾದರೂ ಇಂತಹದೊಂದು ಅಗತ್ಯ ತೀರ್ಮಾನವನ್ನು ಕೈಗೊಳ್ಳುವುದಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಅದಕ್ಕಾಗಿ ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿಗಳಿಗೆ ಋಣಿ. ಶಾಸಕಾಂಗ ತೆಗೆದುಕೊಳ್ಳಬಹುದಾದ ತೀರ್ಮಾನ ತೆಗೆದುಕೊಂಡಿದೆ. ಇನ್ನು, ಈ ನಿಟ್ಟಿನಲ್ಲಿ ಕ್ಷಿಪ್ರವಾಗಿ ಕಾರ್ಯಾಚರಿಸುವುದು, ಕಾರ್ಯಾಂಗದ ಮುಖ್ಯಸ್ಥರಾಗಿ, ರಾಜ್ಯದ ಮುಖ್ಯಕಾರ್ಯದರ್ಶಿಗಳ ಜವಾಬ್ದಾರಿ. ಸ್ವತಃ ತಾಯಿ ಮನಸ್ಸಿನ ಮುಖ್ಯಕಾರ್ಯದರ್ಶಿಯವರು (ಆ ದಂಪತಿ ಈ ಹಿಂದೆ ದ.ಕ.ದಲ್ಲಿ ಜಿಲ್ಲಾಧಿಕಾರಿ-ಜಿಪಂ ಮುಖ್ಯಾಧಿಕಾರಿ ಆಗಿ ಕೆಲಸ ಮಾಡಿದ್ದನ್ನು ಗಮನಿಸಿದ್ದೇನೆ; ನನ್ನ ಗೆಳೆಯರಿಂದ ಕೇಳಿ ತಿಳಿದಿದ್ದೇನೆ) ಈ ನಿಟ್ಟಿನಲ್ಲಿ ವಿಳಂಬ ಮಾಡುವುದಿಲ್ಲ ಎಂದುಕೊಂಡಿದ್ದೇನೆ" ಎಂದು ಹೇಳಿದ್ದಾರೆ. "ಡಾ. ಶ್ರೀನಿವಾಸ ಕಕ್ಕಿಲ್ಲಾಯರಂತಹ ಸಾಂಕ್ರಾಮಿಕ ರೋಗಗಳ ನಿರ್ವಹಣೆಯಲ್ಲಿ ಸಾಕಷ್ಟು ತಳಮಟ್ಟದ ಅನುಭವ ಹಾಗೂ ದೂರದೃಷ್ಟಿ ಇರುವ ವೈದ್ಯರ ಸೇವೆಯನ್ನು ಈ ನಿಟ್ಟಿನಲ್ಲಿ ಸರ್ಕಾರ ಪಡೆಯುವಂತಾಗಲಿ ಎಂದು ಸಲಹೆ ನೀಡಿ, ಸರ್ಕಾರ ಕ್ಷಿಪ್ರ ಕ್ರಮ ಕೈಗೊಂಡು, ಅಕಾರಣವಾಗಿ ಸಾಯಲಿರುವ ಕೆಲವಾದರೂ ಜೀವಗಳನ್ನು ಉಳಿಸುವುದು ಸಾಧ್ಯವಾದರೆ, ಅದಕ್ಕಿಂತ ದೊಡ್ಡ ಜನಸೇವೆ ಬೇರೆ ಇಲ್ಲ" ಎಂದಿದ್ದಾರೆ.