ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ. 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆಗೆ ಏರುವ ಲಕ್ಷಣಗಳು ಕಾಣುತ್ತಿವೆ.
ದೇಶದ ಗಮನ ಸೆಳೆದಿರುವ ದಿಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶದ ಪಕ್ಷಿನೋಟ ಹೊರಬಿದ್ದಿದ್ದು. 46 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 24 ಸ್ಥಾನಗಳಲ್ಲಿ ಆಪ್ ಮುನ್ನಡೆಯಲ್ಲಿದೆ. ಸತತವಾಗಿ 15 ವರ್ಷ ದೆಹಲಿಯಲ್ಲಿ ರಾಜ್ಯಭಾರ ಮಾಡಿದ ಕಾಂಗ್ರೆಸ್ ಮತ್ತೊಮ್ಮೆ ಕಳಪೆ ಸಾಧನೆಯತ್ತ ಸಾಗಿದೆ.
ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಹುಮತಕ್ಕೆ ಬೇಕಾದ ಸಂಖ್ಯೆಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಮುನ್ನಡೆಯ ಟ್ರೆಂಡ್‌ಗಳು ಬಿಜೆಪಿ ನಾಯಕರಲ್ಲಿ ಸಂಭ್ರಮ ಹೆಚ್ಚಿಸಿದೆ. ಬಿಜಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸಿಹಿ ಹಂಚಿ ಖುಷಿ ವ್ಯಕ್ತಪಡಿಸುತ್ತಿದ್ದಾರೆ.
ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ ಈ ಸ್ಥಾನಗಳನ್ನು ಮುನ್ನಡೆಯಲ್ಲಿ ಭದ್ರಬಡಿಸಿಕೊಂಡಿದೆ. 2013ರ ಚುನಾವಣೆಯಲ್ಲಿ ಬಿಜೆಪಿ 31 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ ಅಧಿಕಾರದಿಂದ ದೂರ ಉಳಿದಿತ್ತು. 2015ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಬಿಜೆಪಿ 3 ಸ್ಥಾನಗಳನ್ನು ಪಡೆದಿತ್ತು.
15 ವರ್ಷಗಳ ಕಾಲ ರಾಷ್ಟ್ರ ರಾಜಧಾನಿಯನ್ನು ಆಳಿದ ಕಾಂಗ್ರೆಸ್ 2013ರ ವಿಧಾನಸಭಾ ಚುನಾವಣೆಯಲ್ಲಿ 8 ಸ್ಥಾನಗಳನ್ನು ಪಡೆದಿತ್ತು. 28 ಕ್ಷೇತ್ರಗಳಲ್ಲಿ ಗೆದಿದ್ದ ಎಎಪಿಗೆ ಬೆಂಬಲ ನೀಡಿತ್ತು. ಆದರೆ ಕೆಲವೇ ದಿನಗಳಲ್ಲಿ ಮೈತ್ರಿ ಮುರಿದು ಹೋಗಿತ್ತು. 2015ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 67 ಸ್ಥಾನಗಳನ್ನು ಗೆದ್ದು ಹೊಸ ದಾಖಲೆ ಬರೆದಿತ್ತು. ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿತ್ತು. 2020ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 62 ಸ್ಥಾನಗಳನ್ನು ಗೆದ್ದು ಎರಡನೇ ಸಲ ಅಧಿಕಾರ ಹಿಡಿದಿತ್ತು. ಬಿಜೆಪಿ 8 ಸ್ಥಾನಗಳನ್ನು ಪಡೆದಿತ್ತು. ಕಾಂಗ್ರೆಸ್ ಆಗಲೂ ಶೂನ್ಯ ಸಂಪಾದನೆ ಮಾಡಿತ್ತು. 2025ರ ಚುನಾವಣೆಯಲ್ಲೂ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡುವ ಸಾಧ್ಯತೆ ಕಾಣುತ್ತಿದೆ.