ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಸಮೀಪವಿರುವ ತಣಿಗೆಬೈಲು ಗ್ರಾಮದ ಅರೇಕಾ ಗ್ರೀಮ್ಸ್ ಎಸ್ಟೇಟ್‌ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಲಂಬಾಣಿ ಸಮುದಾಯಕ್ಕೆ ಸೇರಿದ ವಿನೋದಾ(55) ಎಂಬುವವರು ಕಾಡಾನೆ ದಾಳಿಯಿಂದ ಸಾವನಪ್ಪಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ವಿನೋದಾ ಅವರ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭದ್ರಾ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪರಿಹಾರಕ್ಕಾಗಿ ಜಿಲ್ಲಾಡಳಿತ ನೀಡಿದ್ದ ಚೆಕ್ ‘ಬೌನ್ಸ್’
“ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ರೈತರ ಬೆಳೆಗಳ ಮೇಲೆ ಹಾಗೂ ಮಾನವರ ಮೇಲೆ ದಾಳಿ ನಡೆಸುತ್ತಿವೆ. ಇದರಿಂದ ಪ್ರಾಣಹಾನಿ ಹೆಚ್ಚಾಗಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
