- ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತ ಚಾಲನೆ
- ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರಿಂದ ಲೋಗೋ ಅನಾವರಣ
ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಏಕಕಾಲಕ್ಕೆ ರಾಜ್ಯಾದ್ಯಂತ ಚಾಲನೆ ನೀಡಲಾಯಿತು.
ವಿಧಾನಸೌಧದ ಪೂರ್ವದ್ವಾರದ ಮುಂಭಾಗದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ರಾಜ್ಯದ ಎಲ್ಲ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತವಾಗಿ ಚಾಲನೆ ನೀಡಿದರು.
ಇದೇ ವೇಳೆ ಆಯಾ ಜಿಲ್ಲಾ ಉಸ್ತುವಾರಿಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಉಡುಪಿಯಲ್ಲಿ ಲಕ್ಷ್ಮಿ ಹೆಬ್ಬಾಳರ್, ಮೈಸೂರಿನಲ್ಲಿ ಎಚ್ ಸಿ ಮಹದೇವಪ್ಪ, ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ, ಬಾಗಲಕೋಟೆಯಲ್ಲಿ ಆರ್ ಬಿ ತಿಮ್ಮಾಪೂರ, ತುಮಕೂರಿನಲ್ಲಿ ಡಾ. ಜಿ ಪರಮೇಶ್ವರ್, ಹಾಸನದಲ್ಲಿ ಕೆ ಎನ್ ರಾಜಣ್ಣ ಸೇರಿದಂತೆ ಹಲವು ಸಚಿವರು ತಮ್ಮ ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಕಲಬುರಗಿ | ನುಡಿದಂತೆ ನಡೆದಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ
“ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಗೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಕ್ತಿ ಯೋಜನೆಗೆ ಚಾಲನೆ ನೀಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಮೊದಲ ಪ್ರಯತ್ನ ವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದ 14.50 ಕೋಟಿ ಹಾಗೂ ಜಿಲ್ಲೆಯ 1.50 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ” ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ್ ಬದೋಲೆ, ಕೆಕೆಆರ್ ಡಿಬಿ ಕಾರ್ಯದರ್ಶಿ ಅನಿವೃದ್ಧಿ ಶ್ರವಣ್, ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.