ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಅಲೇನಹಳ್ಳಿಯಿಂದ ಕೆ.ಆರ್ ಪೇಟೆ ತೆರಳುತ್ತಿದ್ದ ಬಸ್, ಕುಂದಹಳ್ಳಿ ಬಳಿ ಮರಕ್ಕೆ ಡಿಕ್ಕಿ ಹೊಡೆದು, ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬಸ್‌ನಲ್ಲಿ ಹೆಚ್ಚಿನ ಪ್ರಯಾಣಿಕರು ವಿದ್ಯಾರ್ಥಿಗಳೇ ಇದ್ದರು. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೆ.ಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಗೊಂಡರವಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಕೆ.ಆರ್ ಪೇಟೆ ಬಳಿ ಮರಕ್ಕೆ ಬಸ್ ಡಿಕ್ಕಿಹೊಡೆದಿದೆ. ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ತಕ್ಷಣವೇ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳುವಂತಾಗಲೆಂದು ಹಾರೈಸುತ್ತೇನೆ” ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.