ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.
ಬಿ ಆರ್ ಪಾಟೀಲ್ ಅವರಿಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಉಪಾಧ್ಯಕ್ಷ ಸ್ಥಾನ ನೀಡುವುದರ ಜೊತೆಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಫೆ.17ರಂದು ಸರ್ಕಾರ ಆದೇಶಿಸಿದೆ.
ಈ ದಿನ.ಕಾಮ್ ಜೊತೆ ಮಾತನಾಡಿದ ಶಾಸಕ ಬಿ ಆರ್ ಪಾಟೀಲ್, “ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನವನ್ನು ಸಂತೋಷದಿಂದ ಒಪ್ಪಿದ್ದೇನೆ. ನನ್ನ ಅಸಮಾಧಾನಗಳನ್ನು ಮುಖ್ಯಮಂತ್ರಿ ಅವರ ಬಳಿ ಚರ್ಚಿಸಿಯೇ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದೆ” ಎಂದು ಹೇಳಿದರು.
ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ಜೋರಾಗಿದ್ದ ಸಮಯದಲ್ಲಿ ಶಾಸಕ ಬಿ ಆರ್ ಪಾಟೀಲ್ ಅವರು ಫೆ.1ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆಗೆ ನಿಜ ಕಾರಣ ಏನು ಎಂಬುದು ತಿಳಿದು ಬಂದಿರಲಿಲ್ಲ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’
ಆದರೆ, ಮುಖ್ಯಮಂತ್ರಿ ಸಲಹೆಗಾರರಗಾಗಿ ಒಂದು ವರ್ಷದಿಂದ ಸೇವೆ ಸಲ್ಲಿಸಿದ್ದ ಬಿ ಆರ್ ಪಾಟೀಲ್ ಅವರು ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಸಿದ್ದರಾಮಯ್ಯನವರ ಹಳೆಯ ಸ್ನೇಹಿತ ಹಾಗೂ ಪರಮಾಪ್ತರಲ್ಲಿ ಒಬ್ಬರಾದ ಬಿ ಆರ್ ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಾಗ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್ ಕಲಬುರಗಿ ಜಿಲ್ಲೆಯಿಂದ ತಮಗೆ ಅಡ್ಡಲಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದರು.
ಶಾಸಕಾಂಗ ಸಭೆಯಲ್ಲಿ ಬಿ ಆರ್ ಪಾಟೀಲ್ ಅವರು ಸರ್ಕಾರ ಹಾಗೂ ಸಚಿವರ ಮೂಲಕ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು. ಇದೇ ರೀತಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಕೂಡ ಹಲವು ಬಾರಿ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸಿದ್ದರು. ಈ ಇಬ್ಬರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವರಾಜ ರಾಯರೆಡ್ಡಿ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ, ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದರು.