ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 119 ಕೆಜಿ ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್ (38), ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33), ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಮಹೇಶ್ ದ್ವಾರಿಕಾನಾಥ ಪಾಂಡೆ (30) ಮತ್ತು ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯ ಜೀವನ್ ಸಿಂಗ್(35) ಬಂಧಿತ ಆರೋಪಿಗಳು.
ನಿನ್ನೆ (ಫೆ.17) ಮಂಗಳೂರು ನಗರಕ್ಕೆ ಆಂಧ್ರಪ್ರದೇಶ ರಾಜ್ಯದಿಂದ ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಕಾರಿನಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮಿತ್ತಕೋಡಿ ಬಳಿ ಎರಡೂ ವಾಹನಗಳನ್ನು ಗುರುತಿಸಿ, ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಆರೋಪಿಗಳು ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ವಾಹನವನ್ನು ಹಾಗೂ ಈ ವಾಹನಗಳಲ್ಲಿ ಸಾಗಿಸುತ್ತಿದ್ದ ರೂ.35 ಲಕ್ಷ ಮೌಲ್ಯದ 119 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಬಂಧಿತರಿಂದ 5 ಮೊಬೈಲ್ ಫೋನ್ಗಳು, ಮೀನು ಸಾಗಾಟಕ್ಕೆ ಉಪಯೋಗಿಸುವ ಮೀನಿನ ಕ್ರೆಟ್ ಹಾಗೂ ಇತರ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಮಂಗಳೂರು | ಸಂಶೋಧನೆ, ಅಭಿವೃದ್ಧಿ ಚಟುವಟಿಕೆ ಹೆಚ್ಚಿಸುವ ಉದ್ದೇಶದಿಂದ ತಿಳುವಳಿಕಾ ಒಡಂಬಡಿಕೆಗೆ ಸಹಿ
ಆರೋಪಿಗಳು ಈಗಾಗಲೇ ಆಯಾ ರಾಜ್ಯಗಳಲ್ಲಿ ಗಾಂಜಾ ಖರೀದಿ ಹಾಗೂ ಮಾರಾಟದ ಆರೋಪಗಳನ್ನು ಎದುರಿಸುತ್ತಿದ್ದು, ಪ್ರಕರಣಗಳು ದಾಖಲಾಗಿವೆ. ಈ ಬೃಹತ್ ಗಾಂಜಾ ಮಾರಾಟ, ಸಾಗಣೆ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
