ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಹಾಗೂ ಗಲಭೆಗೆ ಪ್ರಚೋದನೆ ನೀಡಿದ್ದ ಪ್ರಕರಣ ಸಂಬಂಧ 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನವಾಗಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಸಮಯದಲ್ಲಿ ಸತೀಶ ಎಂಬ ಕಿಡಿಗೇಡಿ ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂ ಅಖಿಲೇಶ್ ಯಾದವ್ ಹಾಗೂ ಅರವಿಂದ್ ಕೇಜ್ರಿವಾಲ್‌ರ ಭಾವಚಿತ್ರವನ್ನು ಕೆಟ್ಟದಾಗಿ ಚಿತ್ರಿಸಿ, ಧರ್ಮವೊಂದಕ್ಕೆ ಅವಹೇಳನವಾಗುವಂತ ಸಂದೇಶ ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಘಟನೆ ಸಂಬಂಧ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.
ಆ ವೇಳೆ ಠಾಣೆ ಮುಂದೆ ಜಮಾಯಿಸಿದ್ದ ಸಾವಿರಾರು ಜನರು ರಸ್ತೆ ತಡೆದು, ಪ್ರತಿಭಟನೆ ನಡೆಸಿದ್ದರು. ಅದೇ ಸಮಯದಲ್ಲಿ ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು, ಪೊಲೀಸ್ ಠಾಣೆ ಹಾಗೂ ಪೊಲೀಸ್ ವಾಹನದ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು.ಈ ಘಟನೆಗೆ ಪ್ರಚೋದನೆ ನೀಡಿದ್ದು ಮೌಲ್ವಿ ಮುಫ್ತಿ ಮುಸ್ತಾಕ್ ಅನ್ನುವ ಆರೋಪ ಕೇಳಿಬಂದಿತ್ತು.
ಕಲ್ಲು ತೂರಾಟ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸದ ಸರ್ಕಾರದ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿತ್ತು. ಬಿಜೆಪಿ ಮುಖಂಡ ಮಾಜಿ ಶಾಸಕ ಸಿ ಟಿ ರವಿ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಶ್ನೆ ಮಾಡಿದ್ದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಸರ್ಕಾರಿ ಭೂಮಿ ಒತ್ತುವರಿ ‘ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯ
ಕಡೆಗೂ ಉದಯಗಿರಿ ಪೊಲೀಸರು ಗಲಾಟೆಗೆ ಪ್ರಚೋದನೆ ನೀಡಿದ್ದ ಮೌಲ್ವಿಯನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
