ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಫೈನಾನ್ಸ್, ಲೇವಾದೇವಿ ವ್ಯಾಪಾರಸ್ಥರು ಹಾಗೂ ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನ ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼ ಮಾ.14ರ ಒಳಗಾಗಿ ಜಿಲ್ಲೆಯ ಎಲ್ಲಾ ಫೈನಾನ್ಸ್, ಮೈಕ್ರೋ ಫೈನಾನ್ಸ್, ಲೇವಾದೇವಿ ವ್ಯಾಪಾರಸ್ಥರು, ಹಣಕಾಸು ಸಂಸ್ಥೆಗಳು ದಾಖಲಾತಿ ಸಹಿತ ಮುಚ್ಚಳಿಕೆ ಪತ್ರ ಸಲ್ಲಿಸಬೇಕುʼ ಎಂದರು.
ʼಮೈಕ್ರೊ ಫೈನಾನ್ಸಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಿಗಳನ್ನು ಪರಿಶೀಲಿಸಿ, ಅವರ ಆದಾಯದ ಶೇ50 ರಷ್ಟು ಮಾತ್ರ ಸಾಲ ನೀಡಬೇಕು, ಆದರೆ, ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವ ಬಗ್ಗೆ ಕಂಡು ಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕುʼ ಎಂದರು.
ʼಆರ್‌ಬಿಐ ಮಾರ್ಗಸೂಚಿಯ ಪ್ರಕಾರ ಮೈಕ್ರೊ ಫೈನಾನ್ಸಗಳು ₹3 ಲಕ್ಷದವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ಮರುಪಾವತಿಯನ್ನು ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು, ಕಾನೂನನ್ನು ಉಲ್ಲಂಘಿಸಿ, ದೌರ್ಜನ್ಯ, ಕೆಟ್ಟ ಪದಗಳಲ್ಲಿ ಬೈಯುವುದು, ದಬ್ಬಾಳಿಕೆ ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆʼ ಎಂದರು.
‘ಜಿಲ್ಲೆಯಲ್ಲಿ 127 ನೋಂದಾಯಿತ ಮೈಕ್ರೋ ಫೈನಾನ್ಸ್, ಲೇವಾದೇವಿ ವ್ಯಾಪಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳಿದ್ದು, ಜಿಲ್ಲೆಯ 1.79 ಸಾವಿರ ಜನರಿಗೆ ಸುಮಾರು ₹1,193 ಕೋಟಿ ಸಾಲ ವಿತರಣೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
‘ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಿಗ್ಗೆ 9ಕ್ಕೂ ಮುನ್ನ ಸಂಜೆ 5ರ ನಂತರ ಸಾಲಗಾರರ ಮನೆಗೆ ಹೋಗಬಾರದು. ಯಾವುದೇ ರೀತಿಯ ದೌರ್ಜನ್ಯ ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದುʼ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿ : ಓರ್ವ ಸಾವು
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ, ಬೀದರ ನಗರಾಭಿವೃದ್ಧಿ ಕೋಶದ ಮೋತಿಲಾಲ್ ಲಮಾಣಿ, ಸಹಕಾರ ಸಂಘಗಳ ಉಪನಿಬಂಧಕರಾದ ಮಂಜುಳಾ ಸೇರಿದಂತೆ ಇತರರು ಉಪಸ್ಥಿತರಿದ್ದರು.