- ತಾಲೂಕು- ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸಾ ಯಂತ್ರಗಳ ಅಳವಡಿಕೆಯಲ್ಲಿ ವಿಳಂಬ
- ಹಣ ಇದ್ದರೂ ಸಮರ್ಪಕ ಬಳಕೆ ಯಾಕಿಲ್ಲ? ಅಧಿಕಾರಿಗಳನ್ನು ಪ್ರಶ್ನಿಸಿದ ಸಿಎಂ
ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಅವರ ಜಿಲ್ಲಾಸ್ಪತ್ರೆಗಳಲ್ಲೇ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಜನ ಸರ್ಕಾರಿ ಆಸ್ಪತ್ರೆ ಬಿಟ್ಟು ಬೇರೆ ಕಡೆ ಹೋಗುವಂತಹ ಸನ್ನಿವೇಶ ನಿರ್ಮಾಣವಾದರೆ ಅದಕ್ಕೆ ಜಿಲ್ಲಾ ಆರೋಗ್ಯ ಇಲಾಖೆಯವರೇ ಹೊಣೆಗಾರರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಇಂದು (ಜೂನ್ 13) ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಹಾಗೂ ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಲಭ್ಯತೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕು, ಜನರಿಗೆ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಸೌಲಭ್ಯಗಳು ದೊರಕುವಂತಾಗಬೇಕು ಹಾಗೂ ಈ ಎಲ್ಲ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾದ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಜನ ಬರಬೇಕು. ನಾನು ಮೂರು ತಿಂಗಳಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರೆದರೆ ಅಧಿಕಾರಿಗಳೇ ಇದಕ್ಕೆ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು.
ಅಧಿಕಾರಿಗಳಿಗೆ ಕ್ಲಾಸ್
ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳ ಕಾರ್ಯ ವೈಖರಿ ಹಾಗೂ ಯೋಜನೆ ಪ್ರಗತಿ ಮತ್ತು ಅನುಷ್ಠಾನದ ಬಗ್ಗೆ ಮಾಹಿತಿ ಪಡೆದುಕೊಂಡರು. ಯೋಜನೆ ಜಾರಿ ವಿಚಾರದಲ್ಲಿನ ನಿರ್ಲಕ್ಷ್ಯ ಹಾಗೂ ಲೋಪದ ಬಗ್ಗೆ ಕಿಡಿಕಾರಿದ ಸಿಎಂ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಸಿಎಂ ಗರಂ ಆದರು.
ರಾಷ್ಟ್ರೀಯ ಆರೋಗ್ಯ ಮಿಷನ್ ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವುದನ್ನು ಗುರುತಿಸಿದ ಸಿಎಂ, ಈ ಯೋಜನೆ ಅಡಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು.
ಈ ಯೋಜನೆಯಡಿ ಶೇ. 52 ರಷ್ಟು ತಜ್ಞ ವೈದ್ಯರ ಕೊರತೆ ಇದೆ, ಶೇ. 31 ರಷ್ಟು ಎಂಬಿಬಿಎಸ್ ವೈದ್ಯರ ಕೊರತೆ ಹಾಗೂ ಶೇ. 18 ರಷ್ಟು ನರ್ಸ್ ಸಿಬ್ಬಂದಿ ಕೊರತೆ ಇದೆ. ಇಲ್ಲಿಗೆ ಹೆಚ್ಚುವರಿ ಹುದ್ದೆ ಭರ್ತಿ ಮಾಡುವುದರ ಜೊತೆಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ವೆಚ್ಚ ಮಾಡಬೇಕು ಎಂದು ಮುಖ್ಯಮಂತ್ರಿಗಳು ಇಲಾಖೆಯ ಆಯುಕ್ತರಿಗೆ ಸೂಚಿಸಿದರು.
ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂ.ಡಿ. ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದರ ಬಗ್ಗೆ ಮಾಹಿತಿ ಪಡೆದ ಸಿಎಂ, ಮುಂದೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ?:ಹಾಸನ | ಪರಿಶಿಷ್ಟರ ಅಭಿವೃದ್ಧಿಗೆ ಪೂರಕ ಬಜೆಟ್ ಮಂಡನೆಗೆ…
ಅಧಿಕಾರಿಗಳಿಗೆ ಸಿಎಂ ಸೂಚನೆ
ತಮಿಳುನಾಡು ಹಾಗೂ ರಾಜಸ್ಥಾನದಲ್ಲಿ ಜಾರಿಯಲ್ಲಿರುವ ಇನ್ಷೂರೆನ್ಸ್ ಮಾದರಿಯನ್ನು ಅಧ್ಯಯನ ಮಾಡಿ, “ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ” ಯೋಜನೆ ಜಾರಿ ಮಾಡಲು ಅನುವಾಗುವಂತೆ ವರದಿ ಕೊಡಿ ಎಂದರು.
ಎಲ್ಲ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿ, ಕಟ್ಟುನಿಟ್ಟಿನ ಸೂಚನೆ ನೀಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ತಿಳಿಸಿದ ಸಿಎಂ, ಲ್ಯಾಬ್ ಟೆಕ್ನಿಷಿಯನ್ ಮತ್ತಿತರ ಅತಿ ಅಗತ್ಯವಿರುವ ಅರೆ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಆದ್ಯತೆ ನೀಡುವಂತೆ ಹಣಕಾಸು ಇಲಾಖೆಗೆ ನಿರ್ದೇಶಿಸಿದರು.
ಔಷಧ ಖರೀದಿ ಪ್ರಕ್ರಿಯೆ ನಿರಂತರವಾಗಿ ನಡೆಯಲು ಅನುವಾಗುವಂತೆ ಎರಡು ವರ್ಷಕ್ಕೊಮ್ಮೆ ಟೆಂಡರ್ ಕರೆಯಲು ಇಲಾಖೆಯು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ. ಹೀಗಾಗಿ ಕೂಡಲೇ ಈ ಲೋಪ ಸರಿಪಡಿಸುವಂತೆ ಆಯುಕ್ತರಿಗೆ ಸಿಎಂ ಸೂಚಿಸಿದರು.