ಅರಣ್ಯ ಭೂಮಿ ಸಾಗುವಳಿದಾರರಿಗೆ ಒಕ್ಕಲೆಬ್ಬಿಸುತ್ತಿರುವುದು ತಡೆಗಟ್ಟಿ ಅರಣ್ಯ ಅಧಿಕಾರಿಗಳ ಕಿರುಕುಳ ನಿಲ್ಲಿಸಿ ರೈತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಈ ಕುರಿತು ನಗರದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಎದುರು ಧರಣಿ ನಡೆಸಿದರು. ನಂತರ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಚೇರಿಯ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ʼಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಾ ಅರಣ್ಯ ಭೂಮಿ, ಸರ್ಕಾರಿ ಭೂಮಿ ಮೇಲೆ ಅವಲಂಬಿತರಾಗಿ ಉಪಜೀವನ ನಡೆಸುತ್ತಿರುವ ಜಿಲ್ಲೆಯ ವಿವಿಧ ಗ್ರಾಮದ ಬಡ ಸಾಗುವಳಿದಾರರಿಗೆ ಒಕ್ಕಲೆಬ್ಬಿಸುತ್ತಿರುವುದು ತಕ್ಷಣವೇ ನಿಲ್ಲಿಸಿ ಸಾಗುವಳಿದಾರರಿಗೆ ಹಕ್ಕು ಪತ್ರ ಕೊಡಬೇಕುʼ ಎಂದು ಆಗ್ರಹಿಸಿದರು.
ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು. ಪ್ರತಿ ಕ್ವಿಂಟಲ್ ತೊಗರಿಗೆ 14,500 ರೂಪಾರಿ ಬೆಂಬಲ ಬೆಲೆ ನಿಗದಿ ಮಾಡಬೇಕು. ಹಾಲು ಉತ್ಪಾದಕರ ಸಹಕಾರ ಸಂಘಗಳು ಕೆಎಂಎಫ್ ಮಾದರಿಯಲ್ಲಿ ತೊಗರಿ ಬೆಳೆಗಾರರ ಸಂರಕ್ಷಣೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕಲ್ಯಾಣ ಕರ್ನಾಟಕ ಬೀದರ್, ಕಲಬುರಗಿ ಜಿಲ್ಲೆಯಲ್ಲಿ ತೇವಾಂಶದ ಕೊರತೆಯಿಂದ ಒಣಗಿದ ತೊಗರಿಗೆ ಪ್ರತಿ ಎಕರೆಗೆ 25,000 ರೂಪಾಯಿ ಪರಿಹಾರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!
ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾಧ್ಯಕ್ಷ ಸೈಯದ್ ಇಸಾಮೊದ್ದೀನ್, ಕಾರ್ಯದರ್ಶಿ ದೇವಾನಂದ ಗಾಯಕವಾಡ ಸೇರಿದಂತೆ ಪ್ರಮುಖರಾದ ಖಾಜಾಮಿಯ್ಯಾ ಶೇರಿಕಾರ್, ಪರಮೇಶ್ವರ ಕಾಂತಾ, ಜಾಫರ್ ಖಾನ್ ಹಾಗೂ ರೈತರು ಪಾಲ್ಗೊಂಡಿದ್ದರು.