ಸಾವಿರಾರು ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಮೂಲಕ ಸರ್ಕಾರಿ ಉರ್ದು ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ದೊಳ್ಳೇನಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು ಒಂದು ಮನೆ ನಿಬಾಯಿಸುವುದೇ ಕಷ್ಟದ ಕೆಲಸವಾಗಿರುವ ಈ ಸಂದರ್ಭದಲ್ಲಿ ನೂರು ವರ್ಷಗಳ ಕಾಲ ಶಾಲೆಯನ್ನು ಜೋಪಾನವಾಗಿ ಕಾಪಾಡಿಕೊಂಡು ಬಂದಿರುವುದು ಕಷ್ಟದ ಕೆಲಸ. ಈ ಶಾಲೆಯಲ್ಲಿ ಪಾಠ ಮಾಡಿ, ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರುವ ಎಲ್ಲಾ ಶಿಕ್ಷಕರೂ ಅಭಿನಂದನೆಗೆ ಆರ್ಹರು ಎಂದರು.
ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂಬ ಕಾರಣಕ್ಕೆ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಒಂದೊಂದೇ ಮುಚ್ಚುತ್ತಿರುವ ಈ ಕಾಲದಲ್ಲಿ ನೂರಾರು ವಿದ್ಯಾರ್ಥಿಗಳಿರುವ ಈ ಶಾಲೆಗೆ ಒಬ್ಬರು ಮಾತ್ರ ಖಾಯಂ ಶಿಕ್ಷಕರಿದ್ದರೆ, ಉಳಿದವರು ಅತಿಥಿ ಶಿಕ್ಷಕರಾಗಿದ್ದಾರೆ. ಹತ್ತು ಹದಿನೈದು ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಶಿಕ್ಷಕರು ಖಾಯಂ ಆದರೆ ಅವರ ವೃತ್ತಿ ಜೀವನ ಚೆನ್ನಾಗಿರುವುದರ ಜೊತೆಗೆ ಮಕ್ಕಳ ಭವಿಷ್ಯವೂ ಉಜ್ವಲವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಆಲೋಚನೆ ಮಾಡಬೇಕಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಶತಮಾನ ತುಂಬಿರುವ ದೊಳ್ಳೇನಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಲವಾರು ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದೆ. ಶಾಲಾ ಕೊಠಡಿಗಳು ಶಿಥಿಲಗೊಂಡಿವೆ. ಮಕ್ಕಳಿಗೆ ಸರಿಯಾದ ಶೌಚಾಲಯವಿಲ್ಲ. ಹಾಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಿಇಓ ಅವರು ಇತ್ತ ಗಮನಹರಿಸಿ ಮಕ್ಕಳಿಗೆ ಅಗತ್ಯವಾಗಿ ಬೇಕಾಗಿರುವ ಬೋಧನಾ ಕೊಠಡಿ, ಪೀಠೋಪಕರಣ, ಪಾಠೋಪಕರಣಗಳನ್ನು ನೀಡಿ, ಮಕ್ಕಳ ಸಮಗ್ರ ವಿಕಾಸಕ್ಕೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.
ವೇದಿಕೆಯಲ್ಲಿ ಶಾಲೆಯ ಎಸ್ ಡಿಎಂಸಿ ಅದ್ಯಕ್ಷ ಸವೂದ್, ಶಾಲೆಯ ಶಿಕ್ಷಕ ವೃಂದದವರು, ಸಾವಿರಾರು ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವೇದಿಕೆಯಲ್ಲಿ ಜರುಗಿದವು.
