ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಮಾರ್ಕೊಪೊಲೊ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಮಾರ್ಕೊಪೊಲೊ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಸಚಿವರು, “ಕಳೆದ ಕೆಲವು ವರ್ಷಗಳಿಂದ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಬಹಳಷ್ಟು ಕಷ್ಟ ಎದುರಾಗುತ್ತಿದ್ದು, ಕಾರ್ಮಿಕರನ್ನು ಕಂಪನಿಯಿಂದ ಬೇಕಾಬಿಟ್ಟಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಮುಂದೆ ಹಾಗಾಗಬಾರದು” ಎಂದು ಎಚ್ಚರಿಕೆ ನೀಡಿದರು.
“ಕಾರ್ಮಿಕರಿಗೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡದೆ ಕಂಪನಿಯು ಅನ್ಯಾಯವೆಸಗುತ್ತಿದೆ ಎಂದು ಅನೇಕಬಾರಿ ಮನವಿ ಸಲ್ಲಿಸಿದ್ದಾಗಿ ತಿಳಿಸಿದರು. ಹಾಗಾಗಿ ಕೂಡಲೇ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕಾರ್ಯ ಮಾಡಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ನಾಳೆಯಿಂದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ: ಲಕ್ಷ್ಮಿ ಹೆಬ್ಬಾಳ್ಕರ್
“ಕಾರ್ಮಿಕರೊಂದಿಗೆ ಸಭೆ ಜರುಗಿಸಿ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು” ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದು, ಕಂಪನಿ ಮತ್ತು ಕಾರ್ಮಿಕರ ಒಳಿತಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.