ಭೀಮಾ ನದಿ ದಡದಲ್ಲಿ ಪೊಲೀಸ್ ಪೇದೆಯೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆಗೈದ ಆರೋಪಿ ಟ್ರ್ಯಾಕ್ಟರ್ ಚಾಲಕನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಕಾನ್‌ಸ್ಟೆಬಲ್ ಮೈಸೂರ್ ಚೌಹಾಣ್ ಗುರುವಾರ ಸಂಜೆ ತಡೆದು ನಿಲ್ಲಿಸಿದ್ದರು. ಆ ವೇಳೆ, ಟ್ರ್ಯಾಕ್ಟರ್ ಚಾಲಕ ಚೌಹಾಣ್ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿ, ಹತ್ಯೆಗೈದಿದ್ದ. ಆಯೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ.
ಹೆಡ್ ಕಾನ್‌ಸ್ಟೆಬಲ್ ಹತ್ಯೆಗೈದವರ ವಿರುದ್ಧ ಐಪಿಸಿ ಸೆಕ್ಷನ್ 302, 333, 307, 379, 504 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಪೇದೆ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ, “ಪೇದೆ ಕುಟುಂಬಕ್ಕೆ ಪರಿಹಾರ ನೀಡಲಾಗುವುದು. ಅಕ್ರಮ ಮರಳು ಮಾಫಿಯಾಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪೊಲೀಸ್ ಪೇದೆ ಸಾವಿನ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, “ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ‘ಗೂಂಡಾಗಿರಿ’ ಹೆಚ್ಚಾಗುತ್ತದೆ. ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದೆ.