ಸಿಐಎಸ್ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದೆ. ಮೃತನನ್ನು ಉತ್ತರ ಪ್ರದೇಶದ ಮೂಲದ ಅಭಿಷೇಕ್ ಸಿಂಗ್ ಎಂದು ಗುರುತಿಸಲಾಗಿದೆ. ಆತ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುನ್ನ ಅಭಿಷೇಕ್ ಸಿಂಗ್ ವಿಡಿಯೋ ಮಾಡಿ, ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ತನ್ನ ಸಾವಿಗೆ ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಅವರೇ ಕಾರಣವೆಂದು ಆರೋಪಿಸಿದ್ದಾರೆ.
“ಮೋನಿಕಾ ಅವರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದರು. ನನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಆದರೆ, ಆಕೆಗೆ ಈಗಾಗಲೇ ಮದುವೆಯಾಗಿದ್ದು, ನನಗೆ ವಂಚಿಸಿದ್ದಾರೆ. ನನ್ನೊಂದಿಗೆ ವಿವಾಹೇತರ ಸಂಬಂಧ ಬಳೆಸಿ, ಮೋಸ ಮಾಡಿದ್ದಾರೆ” ಎಂದು ಅಭಿಷೇಕ್ ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.