ಬಿಎಸ್‌ಪಿಎಲ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಕಂಪೆನಿ(ಬಲ್ಡೋಟಾ ಕೈಗಾರಿಕೆ)ಯು ಈಗಾಗಲೇ 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಏಕೀಕೃತ(ಇಂಟಿಗ್ರೇಟೆಡ್) ಉಕ್ಕಿನ ಕಾರ್ಖಾನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನರ ದೊಡ್ಡಮಟ್ಟದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯವರು ಮಾಡುತ್ತಿರುವ ಸಿದ್ಧತಾ ಕಾರ್ಯಗಳನ್ನು ಕೂಡಲೇ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿಯವರಿಗೆ ಸೂಚಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜಿಲ್ಲೆಯ ಸರ್ವಪಕ್ಷಗಳ ಜನಪ್ರತಿನಿಧಿಗಳು ಹಾಗೂ ಕೊಪ್ಪಳ ಪರಿಸರ ಹಿತರಕ್ಷಣಾ ವೇದಿಕೆ ಮುಖಂಡರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿಯಾದ ನಿಯೋಗ, “ಕಾರ್ಖಾನೆ ವಿಸ್ತರಣೆ ಮಾಡಿದರೆ ಜಿಲ್ಲೆಯಲ್ಲಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ, ಜಿಲ್ಲಾಕೇಂದ್ರಕ್ಕೆ ವಿಪರೀತ ಧೂಳು ಬರುತ್ತದೆ. ಕೊಪ್ಪಳದ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ವಿಸ್ತರಣೆಗೆ ಅವಕಾಶ ಕೊಡಬಾರದು” ಎಂದು ಮನವರಿಕೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಈ ಕುರಿತು ತ್ವರಿತ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
“ಕಾರ್ಖಾನೆ ಆರಂಭಿಸಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ಕೊಟ್ಟಿಲ್ಲ. ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದರ ಕುರಿತು ಕೈಗಾರಿಕಾ ಸಚಿವ ಎಂ ಬಿ ಪಾಟೀಲರೊಂದಿಗೆ ಸಭೆ ನಡೆಸುವೆ” ಎಂದು ಹೇಳಿದ್ದು, ಕಾರ್ಖಾನೆ ಆರಂಭಕ್ಕೆ ನಡೆಯುತ್ತಿರುವ ಕೆಲಸ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರಯೋಗಾತ್ಮಕ ವಿಜ್ಞಾನ ಕಲಿಕೆ ಹೆಚ್ಚು ಪರಿಣಾಮಕಾರಿ: ಚಂದ್ರಶೇಖರ್ ಕಲ್ಯಾಣಮಠ
ನಿಯೋಗದಲ್ಲಿ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಜನಾರ್ಧನ ರೆಡ್ಡಿ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ದೊಡ್ಡನಗೌಡ ಪಾಟೀಲ, ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಶರಣಗೌಡ ಬಯ್ಯಾಪುರ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮುಖಂಡರಾದ ವೀರೇಶ ಮಹಾಂತಯ್ಯನಮಠ, ಸಂತೋಷ ದೇಶಪಾಂಡೆ, ಶರಣಪ್ಪ ಸಜ್ಜನ, ಮುನಿರಾಬಾದ್ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಮಾಜಿ ಶಾಸಕರಾದ ಕೆ ಬಸವರಾಜ ಹಿಟ್ನಾಳ, ಕೆ ಶರಣಪ್ಪ ಕರಿಯಣ್ಣ ಸಂಗಟಿ ಸೇರಿದಂತೆ ಹಲವು ಪಕ್ಷಗಳ ನಾಯಕರು, ಸಂಘಟನೆಗಳ ಪ್ರಮುಖರು ಇದ್ದರು.