ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಮದ್ದೂರು ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಇತರರ ವಿರುದ್ಧ ದಾಖಲಾಗಿರುವ ಭೂಕಬಳಿಕೆ ಪ್ರಕರಣದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮದ ಕುರಿತು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಬಿಡದಿಯ ಕೇತಗಾನಹಳ್ಳಿ ಬಳಿ ಎಚ್.ಡಿ ಕುಮಾರಸ್ವಾಮಿ ಮತ್ತು ಡಿ.ಸಿ ತಮ್ಮಣ್ಣ ಹಾಗೂ ಸಂಬಂಧಿಗಳು 14 ಎಕರೆ ಭೂಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ಜಿ. ಮಾದೇಗೌಡ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 2014ರಲ್ಲಿ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದಲ್ಲಿ ಆರೋಪಿಗಳಿಂದ ಒತ್ತುವರಿಯಾಗಿರುವ ಭೂಮಿಯನ್ನು ತೆರವುಗೊಳಿಸುವಂತೆ ಈ ಹಿಂದೆ ಅಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು.
ಕೋರ್ಟ್ ನಿರ್ದೇಶನದ ಹೊರತಾಗಿಯೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲವೆಂದು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಸರ್ಕಾರಕ್ಕೆ ತಾಕೀತು ಮಾಡಿದೆ.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲರು, “ಒತ್ತುವರಿ ತೆರವಿಗೆ ಈ ಹಿಂದೆಯೇ ಪ್ರಕರಣದ ಆರೋಪಿಗಳಿಗೆ ನೋಟಿಸ್ ನೀಡಲಾಗಿತ್ತು. ‘ತಾವು ಸರ್ಕಾರಿ ಜಮೀನು ಒತ್ತುವರಿ ಮಾಡಿಲ್ಲ. ಮಂಜೂರಾದ ಭೂಮಿಯನ್ನಷ್ಟೇ ಖರೀದಿ ಮಾಡಿದ್ದೇವೆ’ ಎಂದು ನೋಟಿಸ್‌ಗೆ ಉತ್ತರಿಸಿದ್ದಾರೆ. ಅಲ್ಲದೆ, ಪರಿಶೀಲನೆ ವೇಳೆ ದಾಖಲೆ ನಾಶವಾಗಿರುವುದು ಪತ್ತೆಯಾಗಿದೆ” ಎಂದು ವಾದ ಮಂಡಿಸಿದ್ದಾರೆ.
ಅವರ ವಾದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, “ದಾಖಲೆಗಳು ನಾಶವಾಗಿವೆ ಎಂದರೆ ಏನರ್ಥ? ಭೂಮಿ ದಾಖಲೆಗಳಿಗೆ ಸರ್ಕಾರವೇ ಜವಾಬ್ದಾರಿಯಾಗಿರುತ್ತದೆ. ಪ್ರಕರಣದಲ್ಲಿ ಸರ್ಕಾರದ ಎಷ್ಟು ಜಮೀನು ಒತ್ತುವರಿಯಾಗಿದೆ. ಎಷ್ಟು ಜಮೀನನ್ನು ಸರ್ಕಾರ ಮರಳಿ ವಶಕ್ಕೆ ಪಡೆದುಕೊಂಡಿದೆ ಎಂಬುದರ ಕುರಿತು ವರದಿ ಸಲ್ಲಿಸಬೇಕು” ಎಂದು ನಿರ್ದೇಶನ ನೀಡಿದೆ.